ಐಪಿಜಿಆರ್‌ಎಸ್‌ನಲ್ಲಿ ಜನರ ಅರ್ಜಿಗಳ ಸ್ಥಿತಿಗತಿಯ ಮಾಹಿತಿ: ಡಿಸಿ ವಿದ್ಯಾಕುಮಾರಿ

| Published : Jun 27 2024, 01:06 AM IST

ಐಪಿಜಿಆರ್‌ಎಸ್‌ನಲ್ಲಿ ಜನರ ಅರ್ಜಿಗಳ ಸ್ಥಿತಿಗತಿಯ ಮಾಹಿತಿ: ಡಿಸಿ ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪಕಾಲದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಕಳೆದ ವರ್ಷದಿಂದ ಆರಂಭಿಸಲಾಗಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಅಲ್ಲದೇ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ಜನರು ಆನ್‌ಲೈನ್ ಮೂಲಕ ಪರಿಶೀಲಿಸಲು ಅನುಕೂಲವಾಗುವಂತೆ ಐ.ಪಿ.ಜಿ.ಆರ್.ಎಸ್. ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಇದರಿಂದ ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವುದರ ಜೊತೆಗೆ ಆನ್‌ಲೈನ್ ಮೂಲಕ ಪರಿಶೀಲಿಸಲು ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಜಿಲ್ಲಾದಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಅವರು ಮಂಗಳವಾರ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆದ ಕುಂದಾಪುರ ತಾಲೂಕು ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದವರು ಸೂಚನೆ ನೀಡಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಜೊತೆಗೆ ಇಲಾಖೆಗಳಲ್ಲಿ ನಿತ್ಯ ಸಾರ್ವಜನಿಕರ ಕೆಲಸವನ್ನು ಸುಗಮವಾಗಿ ಆಗುವ ರೀತಿಯಲ್ಲಿ ಆಗಬೇಕು ಎಂದ ಅವರು, ಕೆಲವೊಮ್ಮೆ ಪಹಣಿ ಬದಲಾವಣೆಗೆ ವರ್ಷಗಟ್ಟಲೇ ಕಾಯುವಂತಹ ಪರಿಸ್ಥಿತಿ ಇದೆ. ಅವುಗಳು ಕಾಲಮಿತಿಯೊಳಗೆ ಆಗಬೇಕು ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರು ಸಹ ತಮ್ಮ ಸಮಸ್ಯೆಗಳು ಬಗೆಹರಿಯುತ್ತವೆ ಎಂಬ ಉತ್ಸಾಹದಿಂದ ಬಂದಿರುತ್ತಾರೆ. ಆದರೆ ಅಧಿಕಾರಿಗಳು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿದ್ಯುತ್ ಸಮಸ್ಯೆ, ಜಮೀನಿನ ಅಳತೆ ವಿಳಂಬ, ರಸ್ತೆ ಸಮಸ್ಯೆ, ಮಳೆಯ ನೀರು ಸರಿಯಾಗಿ ಹರಿದು ಹೋಗದಿರುವ ಬಗ್ಗೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಸುಮಾರು 69 ಅರ್ಜಿಗಳು ಸಲ್ಲಿಕೆಯಾಗಿದ್ದವು.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ರಶ್ಮಿ, ತಹಸೀಲ್ದಾರ್ ಶೋಭಾಲಕ್ಷ್ಮಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.