26-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆಯ ಮೊದಲ ಪೂರ್ವಭಾವಿ ಸಭೆಯಲ್ಲಿ ಲಿಂಗರಾಜ ಭರವಸೆ

ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು

ಬರುವ ಆರ್ಥಿಕ ವರ್ಷದಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಿಂಗರಾಜ ಹೇಳಿದರು.

ಪಟ್ಟಣದ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನಡೆದ 26, 27ನೇ ಸಾಲಿನ ವಾರ್ಷಿಕ ಬಜೆಟ್ ಮಂಡನೆಯ ಮೊದಲ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಬರುವ ಆರ್ಥಿಕ ವರ್ಷದಲ್ಲಿ ಪಟ್ಟಣದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು. ಪಟ್ಟಣದಲ್ಲಿನ ಆದಾಯ ಮತ್ತು ಸರ್ಕಾರದ ಅನುದಾನಗಳ ಬಳಕೆ ಮಾಡಿಕೊಂಡು ಕ್ರಿಯಾ ಯೋಜನೆ ರೂಪಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಕುಡಿಯುವ ನೀರು, ವಿದ್ಯುತ್ ದೀಪ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಿ ಸಾರ್ವಜನಿಕರಿಂದ ದೂರುಗಳು ಬಾರದಂತೆ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದರು.

ಮುಖ್ಯವಾಗಿ ಸಂತೆ ನಡೆಯುವ ಜಾಗವನ್ನು ಬದಲಾಯಿಸುವಂತೆ ಅನೇಕರಿಂದ ದೂರುಗಳು ವ್ಯಕ್ತವಾಗುತ್ತಿವೆ. ಈ ಕುರಿತು ತಹಸೀಲ್ದಾರರ ಜೊತೆ ಚರ್ಚಿಸಿ ಎರಡ್ಮೂರು ವಾರಗಳಲ್ಲಿ ಸಂತೆ ಸ್ಥಳಾಂತರಿಸಲು ಕ್ರಮ ವಹಿಸುತ್ತೇನೆ ಎಂದರು.

ಸಾಯಿಬಾಬಾ ದೇವಸ್ಥಾನದ ಪಕ್ಕದಲ್ಲಿ ಸೂಕ್ತ ಚರಂಡಿ ಇಲ್ಲದೆ ನಿಂತ ನೀರು ಹೊರಗಡೆ ಹೋಗದೆ ಕೊಚ್ಚೆಯಂತಾಗುತ್ತಿದೆ. ಇದರಿಂದ ಅಲ್ಲಿನ ನಿವಾಸಿಗಳು ಡೆಂಘೀ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅಲ್ಲಿನ ಚರಂಡಿ ದುರಸ್ತಿಗೆ ಮೊದಲ ಆದ್ಯತೆ ನೀಡಬೇಕೆಂದು ಸಭೆಯಲ್ಲಿದ್ದವರು ತಿಳಿಸಿದಾಗ ಈ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸಿ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.

ಖಾಸಗಿ ಬಸ್ ನಿಲ್ದಾಣದಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬಸ್ಸುಗಳ ನಿಲಗಡೆ ಜಾಗವು ಸರಿಪಡಿಸಬೇಕು.ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳು ಬೇಕಾ ಬಿಟ್ಟಿಯಾಗಿ ನಿಲ್ಲಿಸುತ್ತಿದ್ದಾರೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ಅಲ್ಲಿನ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಬಸ್‌ಗಳು ಸರಾಗವಾಗಿ ಬಂದು ಹೋಗಲು ಅನುವು ಮಾಡಿಕೊಡಲು ತೀರ್ಮಾನಿಸಲಾಯಿತು.

ಈ ವೇಳೆ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ದೇವೇಂದ್ರಪ್ಪ ಗಣಕಯಂತ್ರ ಸಹಾಯಕ ನೇತ್ರಾವತಿ ಸಿಬ್ಬಂದಿ ಕಾವೇರಿ, ಅಕ್ರಂ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ಮುಖಂಡರಾದ ಎಂ.ಡಿ.ಲತೀಫ್ ಸಾಬ್, ಒಬೆದುಲ್ಲ ಭೀಮಣ್ಣ ಇದ್ದರು.