ಡೆಂಘೀ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ

| Published : Jun 30 2024, 12:49 AM IST

ಡೆಂಘೀ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನ ಆಚರಿಸಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಡೆಂಘೀ ಜ್ವರ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಡೆಂಘೀ ಜ್ವರ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಡೆಂಘೀ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ, ಮನೆಯ ಪರಿಸರದ ಸುತ್ತಮುತ್ತ ನೀರು ನಿಂತು ಲಾರ್ವ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ರಾಜ್ಯಾದ್ಯಂತ ಲಾರ್ವ ಉತ್ಪತ್ತಿ ತಾಣ ನಾಶ ಮಾಡುವ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.ಇನ್ನು ಮುಂದೆ ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಃ ತಮ್ಮ ಮನೆಗಳು ಹಾಗೂ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರು ತುಂಬಿರುವ ಡ್ರಮ್, ಟ್ಯಾಂಕ್‌, ಬ್ಯಾರಲ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು. ಅದೇ ರೀತಿ ಮಳೆ ನೀರು ನಿಲ್ಲುವ ತೊಟ್ಟಿ, ಹಳೆ ಟಯರ್ ಮತ್ತಿತರ ವಸ್ತುಗಳನ್ನು ವಿಲೇವಾರಿ ಮಾಡಬೇಕು. ಇದರಿಂದ ಸೊಳ್ಳೆಗಳ ಉತ್ಪತ್ತಿ ತಾಣ ನಾಶವಾಗಿ ಡೆಂಘೀ ಜ್ವರವನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನ ಆಚರಿಸಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಡೆಂಘೀ ಜ್ವರ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಆರೋಗ್ಯಧಿಕಾರಿ ಡಾ. ತಿಮ್ಮಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಭಂಡಾರಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮತ್ತಿತರರು ಇದ್ದರು.