ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯ ಹಾಗೂ ಕೋಮುವಾದಿಗಳ ಶಕ್ತಿಗಳ ಮೇಲಿದ್ದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕನಕಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯ ಹಾಗೂ ಕೋಮುವಾದಿಗಳ ಶಕ್ತಿಗಳ ಮೇಲಿದ್ದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಕ್ಷದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರ ಬಂದರೆ ಕೋಮುಶಕ್ತಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಾಯಿದೆಗಳನ್ನು ರೂಪಿಸುತ್ತೇವೆ ಎಂದು ಹೇಳಿತ್ತು. ಆದರೆ ಸರ್ಕಾರ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಶಕ್ತಿಗಳ ವಿರುದ್ಧ ಯಾವ ಕಾನೂನು ಜಾರಿಗೊಳಿಸಿಲ್ಲ. ರಾಜಕೀಯ ಸ್ಥಾನಮಾನ ವಿಷಯದಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ಅನ್ಯಾಯ ಮಾಡುತ್ತಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಸ್ಲಿಂ, ದಲಿತ ಹಾಗೂ ಹಿಂದುಳಿದವರಿಗೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿದರು.

ಅಲ್ಲದೇ ಕಾಂಗ್ರೆಸ್ ಸರ್ಕಾರ ಸಂಘ ಪರಿವಾರವನ್ನು ಸಮಾಧಾನ ಪಡಿಸುವ ಉದ್ದೇಶದೊಂದಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ, ಗಲಭೆ ಸೃಷ್ಟಿಸುವವರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ತೆಗೆದುಕೊಂಡಿರುವ ನಿರ್ಧಾರ ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆಯ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ. ಆದುದರಿಂದ ಸರ್ಕಾರ ಈ ಕೂಡಲೇ ತನ್ನ ನಿರ್ಧಾರವನ್ನು ರದ್ದುಪಡಿಸಿ ಈ ಪ್ರಕರಣಗಳಲ್ಲಿ ಕೋಮುವಾದಿ ಗೂಂಡಾಗಳಿಗೆ ಕಾನೂನಾತ್ಮಕ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ಆಲಂ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ದಾವುದ್, ಕಾರ್ಯದರ್ಶಿ ಇಮ್ರಾನ್, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.