ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಕೇವಲ ಒಂದು ತಾಲೂಕನ್ನು ಮಾತ್ರ ಸೇರಿಸಿರುವುದು ಅನ್ಯಾಯ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಕೇವಲ ಒಂದು ತಾಲೂಕನ್ನು ಮಾತ್ರ ಸೇರಿಸಿರುವುದು ಅನ್ಯಾಯ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆರೋಪಿಸಿದ್ದಾರೆ.ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಮಳೆ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿವೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿದ್ದು, ಸಾಲ ಮಾಡಿ ಕೃಷಿ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರದ ಬರ ಪಟ್ಟಿಯಲ್ಲಿ ಜಿಲ್ಲೆಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ದೂರಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳ ವಾಸ್ತವ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು ಬರ ಪಟ್ಟಿಗೆ ಸೇರಿಸುವಂತೆ ಒತ್ತಡ ಏರಬೇಕಿದ್ದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿರುವ ಜಿಲ್ಲೆಯ ರೈತರಿಗೆ ಮಳೆ ಕೊರತೆ ದೊಡ್ಡ ಹೊಡೆತ ನೀಡಿದೆ. ಇಂತಹ ಸಂದರ್ಭದಲ್ಲಿ ಬರ ಘೋಷಣೆಯಲ್ಲಿ ತಾರತಮ್ಯ ಮಾಡಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದ್ದಾರೆ.
ಕೇವಲ ಒಂದು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವುದರಿಂದ ಉಳಿದ ತಾಲೂಕುಗಳ ರೈತರು ಬೆಳೆ ನಷ್ಟ ಪರಿಹಾರ, ಬರ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಬರ ಘೋಷಣೆಯ ಮಾನದಂಡಗಳನ್ನು ಮರುಪರಿಶೀಲಿಸಿ ಜಿಲ್ಲೆಯ ಎಲ್ಲ ತಾಲೂಕುಗಳನ್ನೂ ಬರ ಪಟ್ಟಿಗೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ರೈತರ ಸಂಕಷ್ಟದ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಮೌನ ವಹಿಸಿರುವುದು ಸರಿಯಲ್ಲ. ಮಳೆ ಕೊರತೆಯಿಂದ ತೊಂದರೆಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗದ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.