ಅವಧಿ ಮೀರಿದ ಉತ್ಪನ್ನಗಳ ಬಗ್ಗೆ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಿ

| Published : Dec 26 2024, 01:01 AM IST

ಸಾರಾಂಶ

ಗ್ರಾಹಕರ ವ್ಯಾಜ್ಯಗಳ ಆಯೋಗವು ಗ್ರಾಹಕರ ಹಿತರಕ್ಷಣೆಗಾಗಿ ಇದ್ದು, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಹಕರು ಜಾಹೀರಾತುಗಳನ್ನು ನೋಡಿ ಮೋಸ ಹೋಗಬಾರದು. ಅವಧಿ ಮುಗಿದಿರುವ ಉತ್ಪನ್ನಗಳ ಮಾರಾಟ ಮಾಡಿದ್ದಲ್ಲಿ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಜಿ.ಟಿ. ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವೇದಿಕೆ ಜಂಟಿಯಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಒಂದೇ ರೀತಿ ಗ್ರಾಹಕರೇ ಆಗಿದ್ದು, ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಹಕ ಕಾನೂನುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ಗ್ರಾಹಕ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಗ್ರಾಹಕ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯ ನಾಗಭೂಷಣ ಶರ್ಮಾ ಅವರು ತೂಕ ಮತ್ತು ಮಾಪನದಲ್ಲಿ ಆಗುವ ಮೋಸಗಳ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹರಿಸಬೇಕೆಂದು ತಿಳಿಸಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ರವೀಶ್ ಚಂದ್ರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರಾದ ನಿವೇದಿತಾ ರವೀಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಲಕ್ಷ್ಮಿ, ಆಹಾರ ಶಿರಸ್ತೇದಾರ್ ಬಸವರಾಜು ಮತ್ತು ಆಹಾರ ನಿರೀಕ್ಷಕ, ಉಪನ್ಯಾಸಕ ಗಂಗಾಧರ ಸೇರಿ ಹಲವರು ಹಾಜರಿದ್ದರು.