ರಾಮನಗರ: ಮಾಗಡಿ ತಹಸೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಕಚೇರಿಯಲ್ಲಿ ಸರ್ಕಾರಿ ಕೆಲಸ ಸುಗಮವಾಗಿ ನಡೆಸಲು ಸುರಕ್ಷಿತ ವಾತಾವರಣ ನಿರ್ಮಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ರವರ ನೇತೃತ್ವದಲ್ಲಿ ಜಿಲ್ಲಾ ಶಾಖೆಯ ಅಧ್ಯಕ್ಷ ಎಂ.ಹರ್ಷ, ಗೌರವಾಧ್ಯಕ್ಷ ಎ.ಎಸ್.ಧರೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಎ.ಪಿ.ಯುವರಾಜ್ ಸೇರಿದಂತೆ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿ ತಾಲೂಕು ಕಚೇರಿಯಲ್ಲಿ ರಕ್ಷಣೆ ಒದಗಿಸಲು ಸಾಧ್ಯವಾಗದಿದ್ದರೆ ಎಲ್ಲ ಸಿಬ್ಬಂದಿ ವರ್ಗದವರನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಮಾರ್ಚ್ 6ರಂದು ಮಾಗಡಿ ತಾಲೂಕು ಕಸಬಾ ಹೋಬಳಿ ಹರ್ತಿ ಗ್ರಾಮದ ಶ್ರೀ ಮಾರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವದ ಅಗ್ನಿಕೊಂಡ ಕಾರ್ಯಕ್ರಮದ ಸಂಬಂಧ ಅರ್ಚಕರು ಹಾಗೂ ಕೆಲ ಗ್ರಾಮಸ್ಥರ ಸಮಕ್ಷಮ ತಹಸೀಲ್ದಾರ್ ಸಭೆ ನಡೆಸುತ್ತಿದ್ದರು.

ಈ ಸಂದರ್ಭದಲ್ಲಿ ಹರ್ತಿ ಗ್ರಾಮದ ಹೊನ್ನರಾಜು, ಸಿದ್ದೇಶ್ ಮತ್ತಿತರರು ತಹಸೀಲ್ದಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮಾಗಡಿ ಠಾಣೆ ಪೊಲೀಸರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪದಾಧಿಕಾರಿಗಳು ಆರೋಪಿಸಿದರು.

ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು. ಮಾಗಡಿ ತಾಲೂಕು ಕಚೇರಿಯಲ್ಲಿ ಸರ್ಕಾರಿ ಕೆಲಸವನ್ನು ಸುಗುಮವಾಗಿ ನಡೆಸಲು ಸುರಕ್ಷಿತ ವಾತಾವರಣ ನಿರ್ಮಿಸಲು ಅಗತ್ಯ ಸಹಕಾರ ನೀಡಬೇಕು. ಇಲ್ಲದಿದ್ದರೆ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.


7ಕೆಆರ್ ಎಂಎನ್ 6.ಜೆಪಿಜಿ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ರವರ ನೇತೃತ್ವದಲ್ಲಿ ಕಂದಾಯ ಇಲಾಖಾ ನೌಕರರ ಸಂಘ ಜಿಲ್ಲಾ ಶಾಖೆ ಪದಾಧಿಕಾರಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿದರು.