ಸಾರಾಂಶ
ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಸಿಎಎಫ್ ಡಾ. ಸಂತೋಷ್ ಕುಮಾರ್ ರಿಂದ ಸ್ಥಳ ಪರಿಶೀಲನೆ
ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಸಿಎಎಫ್ ಡಾ. ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಈಗಾಗಲೇ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಮಾಡಲಾಗಿದೆ. ಆದರೂ ಸಹ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಹೇಗಾದರೂ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಲಾಯಿತು.ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ, ಅರಣ್ಯ ಇಲಾಖೆಗೆ ತಾಳಬೆಟ್ಟದಲ್ಲಿ ಚೆಕ್ ಪೋಸ್ಟ್ ತೆರೆಯಲು ಆದೇಶ ನೀಡಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಆದೇಶದಂತೆ ತಾಳಬೆಟ್ಟ ಹಾಗೂ ವಡಕೆ ಹಳ್ಳದ ಬಳಿ ಸ್ಥಳ ಪರಿಶೀಲನೆ ಮಾಡಲಾಗಿದೆ.ಚೆಕ್ ಪೋಸ್ಟ್ ನಿಂದ ಅನುಕೂಲ:
ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದ ತಪ್ಪಲಿನ ತಾಳ ಬೆಟ್ಟದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದರೆ ಭಕ್ತಾದಿಗಳು ತರುವ ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ಪದಾರ್ಥಗಳು, ತಿಂಡಿ ತಿನಿಸುಗಳ ಕವರ್‌ಗಳನ್ನು ತಾಳು ಬೆಟ್ಟದ ಚೆಕ್‌ಪೋಸ್ಟ್‌ನಲ್ಲೇ ತಪಾಸಣೆ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಈಗಾಗಲೇ ಅರಣ್ಯ ಇಲಾಖೆ, ಪರಿಸರ ಪ್ರಿಯರಿಂದ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ಅನಾಹುತದ ಬಗ್ಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಆದರೂ ಸಹ ಭಕ್ತಾದಿಗಳು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡಿಲ್ಲ, ಇನ್ನು ಮುಂದಿನ ದಿನಗಳಲ್ಲಿ ಭಕ್ತರು ಎಚ್ಚೆತ್ತುಕೊಳ್ಳದಿದ್ದರೆ ದಂಡ ಬೀಳುವುದಂತೂ ಗ್ಯಾರಂಟಿ.
ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಲು ಕಮಿಟಿ ರಚನೆ:ಶ್ರೀ ಕ್ಷೇತ್ರದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ರಾಧಿಕಾರದ ಉಪಾಧ್ಯಕ್ಷರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಕಮಿಟಿ ರಚನೆ ಮಾಡಿ, ಪ್ರಾಧಿಕಾರ, ಅರಣ್ಯ ಇಲಾಖೆ, ಅಬಕಾರಿ, ಪೊಲೀಸ್ ಇಲಾಖೆ ಗ್ರಾಪಂ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಜಾತ್ರಾ ಮಹೋತ್ಸವ ಹಾಗೂ ಹಬ್ಬ ಹರಿದಿನಗಳಲ್ಲಿ ಬರುವ ಪಾದಯಾತ್ರಿಕರೂ ಸಹ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಿಕ್ಕಸಿಕ್ಕಲಿ ಬಿಸಾಡದೆ ನಿಗದಿತ ಸ್ಥಳದಲ್ಲಿ ಹಾಕಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ತಮಿಳುನಾಡಿನ ಊಟಿ ಹಾಗೂ ತಿರುಪತಿ ದೇವಾಲಯಗಳಲ್ಲಿ ಬರುವ ಭಕ್ತಾದಿಗಳಿಗೆ ಹಾಗೂ ಪಾದಯಾತ್ರಿಗಳಿಗೆ ಗಾಜಿನ ಬಾಟಲ್ ಗಳಲ್ಲಿ ಕುಡಿಯುವ ನೀರು ಮಾರಾಟ ಮಾಡಲಾಗುತ್ತಿದೆ ಅದರಂತೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಇದೇ ಮಾದರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ ಪ್ಲಾಸ್ಟಿಕ್ ಬಾಟಲ್ ಗಳನ್ನು ತಡೆಗಟ್ಟಬಹುದು ಎಂದು ಚರ್ಚೆ ನಡೆಸಲಾಗಿದೆ.ಪರಿಶೀಲನೆ ವೇಳೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಪಾಟೀಲ್, ವಲಯ ಅರಣ್ಯಾಧಿಕಾರಿ ಭಾರತಿ ನಂದಿಹಳ್ಳಿ ಹಾಗೂ ಇನ್ನಿತರರು ಹಾಜರಿದ್ದರು.ಶ್ರೀ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕಮಿಟಿ ರಚನೆ ಮಾಡಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲು ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನಾಳೆಯಿಂದಲೇ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಸರಸ್ವತಿ, ಕಾರ್ಯದರ್ಶಿ, ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ.ತಾಳುಬೆಟ್ಟದಲ್ಲಿ ಎರಡು ಕಡೆ ಹಾಗೂ ವಡಕೆ ಹಳ್ಳದಲ್ಲಿ ಒಂದು ಕಡೆ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಗ್ರವಾಗಿ ಚರ್ಚೆ ನಡೆಸಿ ಚೆಕ್‌ಪೋಸ್ಟ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು.ಡಾ ಸಂತೋಷ್ ಕುಮಾರ್ ,ಡಿಎಫ್ಓ, ಮಲೆ ಮಹದೇಶ್ವರ ವನ್ಯಜೀವಿಧಾಮ