ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸಿ: ಗಂಗೂಬಾಯಿ ಮಾನಕರ

| Published : Feb 16 2024, 01:46 AM IST

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸಿ: ಗಂಗೂಬಾಯಿ ಮಾನಕರ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಫೆ. 17ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.

ಕಾರವಾರ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಫೆ. 17ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಹಾಗೂ ಎಲ್ಲ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಬಸವಣ್ಣ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬಸವಣ್ಣ ಅವರ ಭಾವಚಿತ್ರ ಅಳವಡಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರಾಂತಿಯೋಗಿ ಜಗಜ್ಯೋತಿ ಬಸವಣ್ಣ 12ನೇ ಶತಮಾನದಲ್ಲಿ ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರೋಧ ವ್ಯಕ್ತಪಡಿಸಿದ್ದ ಅವರು, ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಸರ್ಕಾರವು ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದು ತಿಳಿಸಿದರು.

ವಿಶ್ವ ಗುರು ಬಸವಣ್ಣ ಅವರ ಭಾವಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ. 13ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಿದ್ದಾರೆ. ಫೆ. 17ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣ ಅವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಲಾಗಿದೆ.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಂದು ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಿ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬಸವಣ್ಣ ಅವರ ಭಾವಚಿತ್ರವನ್ನು ಅನಾವರಣಗೊಳಿಸಬೇಕು. ಅನಾವರಣಗೊಳಿಸುವ ಭಾವಚಿತ್ರಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಿ, ಅವರ ಸಂದೇಶಗಳು ಮತ್ತು ವಚನಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು, ಯುವಕ ಸಂಘಗಳ ಸದಸ್ಯರು ಭಾಗವಹಿಸಿ ರಾಜ್ಯದ ಸಾಂಸ್ಕೃತಿಕ ರಾಯಭಾರಿಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯಿಸಿದರು.

ಕಾರವಾರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಮಚಂದ್ರ ಅವರಿಗೆ ಸೂಚಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾತಂಡಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಯುವಕ ಸಂಘಗಳ ಸಹಯೋಗದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಬೇಕು. ರಂಗಮಂದಿರದಲ್ಲಿ ಬಸವಣ್ಣನವರ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ಸದಸ್ಯರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ, ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆಯಾಗಬೇಕು ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ಕನಿಷ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಾಮಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.