ಜಿಲ್ಲೆಯಾದ್ಯಂತ ಸುಮಾರು 2,315 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹಾವೇರಿ: ಜಿಲ್ಲೆಯಾದ್ಯಂತ ಸುಮಾರು 2,315 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸ್ ಠಾಣೆ ಮಟ್ಟದಲ್ಲಿಯೂ ಗಣೇಶೋತ್ಸವ ಆಯೋಜಕರು ಹಾಗೂ ವಿವಿಧ ಸಮುದಾಯಗಳ ಮುಖಂಡರನ್ನು ಒಳಗೊಂಡ ಸೌಹಾರ್ದ ಸಭೆಗಳನ್ನು ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗಿದೆ ಎಂದರು.ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯಕ್ಕೆ ಜಿಲ್ಲೆಯಲ್ಲಿ 1 ಎಸ್‌ಪಿ, 1 ಹೆಚ್ಚುವರಿ ಎಸ್‌ಪಿ, 5 ಡಿವೈಎಸ್‌ಪಿ, 15 ಸಿಪಿಐ, 45 ಪಿಎಸ್‌ಐ, 50 ಎಎಸ್‌ಐ, 500 ಪೊಲೀಸ್ ಕಾನ್‌ಸ್ಟೆಬಲ್, 400 ಗೃಹರಕ್ಷಕ ಸಿಬ್ಬಂದಿ, 9 ಡಿಎಆರ್, 4 ಕೆಎಸ್‌ಆರ್‌ಪಿ ಹಾಗೂ 1 ಒಆರ್‌ಟಿ ತುಕಡಿ ನಿಯೋಜಿಸಲಾಗಿದೆ ಎಂದರು.
ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆಯೋಜಕರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಗಣೇಶ ಪ್ರತಿಷ್ಠಾಪನೆ ಅನುಮತಿಗಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಗಣೇಶ ವಿಸರ್ಜನಾ ಸ್ಥಳಗಳಲ್ಲಿ ಸ್ವಚ್ಛತೆ, ಬೆಳಕಿನ ವ್ಯವಸ್ಥೆ ಹಾಗೂ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ ಎಂದರು.ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ: ಜಿಲ್ಲೆಯಲ್ಲಿ 21 ಅತಿಸೂಕ್ಷ್ಮ, 350 ಸೂಕ್ಷ್ಮ ಹಾಗೂ 1934 ಸಾಧಾರಣ ಪ್ರದೇಶಗಳೆಂದು ಗುರುತಿಸಲಾಗಿದ್ದು, ಸೂಕಷ್ಮ ಪ್ರದೇಶಗಳಲ್ಲಿ ಸಿಸಿಟಿವಿ, ವಾಚ್‌ಟವರ್, ಪಿಎ ವ್ಯವಸ್ಥೆ ಹಾಗೂ ಲೈಟಿಂಗ್ ವ್ಯವಸ್ಥೆ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಅವಘಡಗಳನ್ನು ತಡೆಯಲು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಇದ್ದರು.ಡಿಜೆ ಬಳಕೆಗೆ ನಿಷೇಧ: ಜಿಲ್ಲೆಯಲ್ಲಿ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಡಿಜೆ ಸೌಂಡ್ ಹಾಗೂ ಹೆಚ್ಚು ಶಬ್ದ ಹೊರಸೂಸುವ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಕೆ ನಿಷೇಧಿಸಿದ್ದು, ಈ ಬಗ್ಗೆ ಗಣೇಶೋತ್ಸವ ಸಮಿತಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಗಣೇಶ ಮೂರ್ತಿ ಮೆರವಣಿಗೆ ನಡೆಯುವ ವಿವಿಧ ದಿನಗಳಲ್ಲಿ ಸಂಬಂಧಪಟ್ಟ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುವುದು. ಹಬ್ಬದ ಸಂದರ್ಭದಲ್ಲಿ ಎಲ್ಲ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಹಾಜರಿದ್ದು ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್, ಶಾಮಿಯಾನ ಹಾಗೂ ಮುದ್ರಣಾಲಯಗಳ ವ್ಯವಸ್ಥಾಪಕರ ಸಭೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.