ಸಾರಾಂಶ
ಚಿತ್ರದುರ್ಗ: ಡಿ.29ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಗೆಜೆಟೆಡ್ ಪೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟಲು ಸಿಸಿ ಟಿವಿ ಹಾಗೂ ಜಾಮರ್ ಅಳವಡಿಸಲಾಗುವುದೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‍ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಒಎಂಆರ್ ಬಂಡಲ್‍ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಒಎಂಆರ್ ಬಂಡಲ್‍ಗಳು ತಲುಪುವವರೆಗೂ ತಪ್ಪದೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಮಾಡಲಾಗುವುದು. . ಇದರೊಂದಿಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳುವರು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಫ್ರಿಸ್ಕಿಂಗ್ ತಂಡಗಳನ್ನು ರಚಿಸುವಂತೆ ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ಡಿ.29 ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್ 144 ವಿಧಿಸಿ ನಿಷೇಧಾಜ್ಞೆ ಜಾರಿ ಮಾಡಿ, ಆದೇಶ ಹೊರಡಿಸಲಾಗಿದೆ. ಪರೀಕ್ಷಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಸೆಂಟರ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪಶ್ನೆ ಪತ್ರಿಕೆ ಹಾಗೂ ಒಎಂಆರ್‌ಗಳನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
25 ಪರೀಕ್ಷಾ ಕೇಂದ್ರ, 8170 ಅಭ್ಯರ್ಥಿಗಳು:ಡಿ.29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಪತ್ರಿಕೆ-01 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಪತ್ರಿಕೆ-02 ರ ಪರೀಕ್ಷೆ ನಡೆಯಲಿದೆ. ನಗರದಲ್ಲಿ 25 ಪರೀಕ್ಷಾ ಕೇಂದ್ರಗಳು ಇದ್ದು, ಒಟ್ಟು 8,170 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 155 ವಿಕಲಚೇತನ ಅಭ್ಯರ್ಥಿಗಳು ಇದ್ದಾರೆ. 4 ಅಂಧ ವಿದ್ಯಾರ್ಥಿಗಳಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲು ಕೆಪಿಎಸ್‌ಸಿಯಿಂದ ನಿರ್ದೇಶನ ಬಂದಿದೆ. ವಿಕಲಚೇತನ ಅಭ್ಯರ್ಥಿಗಳ ಸಹಾಯಕ್ಕಾಗಿ ಪರೀಕ್ಷಾ ಕೇಂದ್ರದಲ್ಲಿ ವ್ಹೀಲ್‌ಚೇರ್ ಜೊತೆಗೆ ರ್ಯಾಂಪ್ ಅಳವಡಿಸಲಾಗಿದೆ. ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದಿಂದ ಪರೀಕ್ಷಾ ಮಾಹಿತಿ ಕೈಪಿಡಿ ಬಂದಿದೆ. ಇದರ ಅನುಸಾರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ತಿಳಿಸಿದರು.
ಜಿಪಂ ಸಿಇಓ ಎಸ್.ಜೆ ಸೋಮಶೇಖರ್, ಜಿಲ್ಲಾ ಖಜಾನಾಧಿಕಾರಿ ರಮೇಶ್ ಅರೆ ಮಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.