ವೃತ್ತಿಗೌರವ ಮತ್ತು ಸಮರ್ಪಣಾ ಮನೋಭಾವದಿಂದ ಸಾಮಾನ್ಯ ವಿದ್ಯಾರ್ಥಿಗಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಭಟ್ಕಳ: ಭಟ್ಕಳ ಎಜುಕೇಶನ್ ಟ್ರಸ್ಟನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಹಾಗೂ ದೀಪದಾನ ಕಾರ್ಯಕ್ರಮವನ್ನು ಜಾಲಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವೃತ್ತಿಗೌರವ ಮತ್ತು ಸಮರ್ಪಣಾ ಮನೋಭಾವದಿಂದ ಸಾಮಾನ್ಯ ವಿದ್ಯಾರ್ಥಿಗಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ಶಿಕ್ಷಕರು ವಿದ್ಯಾರ್ಥಿಗಳಿಗೆ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಸದಾ ನೆನಪಿನಲ್ಲಿರಬೇಕಾದ ಶಿಕ್ಷಕರು ನೀವಾಗಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಪೂರ್ವ ವಿದ್ಯಾರ್ಥಿ ಹಾಗೂ ಸಾಗರದ ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಭಾಸ್ಕರ್ ಹೆಬ್ಬಾರ್ ಅವರು ಮಾತನಾಡಿ, ಶಿಲ್ಪಿಯು ಕಲ್ಲಿನಲ್ಲಿರುವ ಬೇಡವಾದ ಭಾಗಗಳನ್ನು ತೆಗೆದು, ಸುಂದರವಾದ ವಿಗ್ರಹವನ್ನು ನಿರ್ಮಿಸುವಂತೆ, ಶಿಕ್ಷಕನು ವಿದ್ಯಾರ್ಥಿಗಳಲ್ಲಿರುವ ಕೆಟ್ಟ ಗುಣಗಳನ್ನು ದೂರ ಮಾಡಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.
ಭಟ್ಕಳ ಎಜುಕೇಶನ್ ಟ್ರಸ್ಟನ ಟ್ರಸ್ಟಿ ಸಮಿತ್ರಾ ಕೌಶೀಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟನ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ್ ನಾಯಕ ಅವರು, ಶಿಕ್ಷಕರು ದೇಶದ ನಿರ್ಮಾತೃರು. ಹಾಗಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.ದಿ ನ್ಯೂ ಇಂಗ್ಲಿಷ್ ಶಾಲೆಯ ಮುಖ್ಯೋಪಾಧ್ಯಾಯ ಶರತ್ ಗುನಗಿ ಅತಿಥಿಗಳಾಗಿ ಆಗಮಿಸಿದ್ದರು. ಅಧ್ಯಕ್ಷತೆಯನ್ನು ವಹಿಸಿದ್ದ ಭಟ್ಕಳ ಎಜುಕೇಶನ್ ಟ್ರಸ್ಟನ ಟ್ರಸ್ಟಿ ರಮೇಶ ಖಾರ್ವಿ ಮಾತನಾಡಿದರು. ವಿವಿಧ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಭಟ್ಟ ಅವರು, ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕ ನಾಗರಾಜ ಮಡಿವಾಳ ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ಲಿಡಿಯಾ, ಸ್ವಾತಿ ಕಾವ್ಯಾ, ಮತ್ತು ಚೈತ್ರಾ ಕಾರ್ಯಕ್ರಮವನ್ನು ನಿರೂಪಿಸಿದರು.