ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯ ಅನುಷ್ಠಾನಕ್ಕೆ ಸೂಚನೆ

| Published : Mar 12 2024, 02:01 AM IST

ಸಾರಾಂಶ

ಜಿಲ್ಲಾ ಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.

ಹೊಸಪೇಟೆ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ತಿದ್ದುಪಡಿಯ ಅಧಿನಿಯಮ-2024ನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಯಿತು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಮಾತನಾಡಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024ಕ್ಕೆ 2024ರ ಫೆಬ್ರವರಿ ತಿಂಗಳಲ್ಲಿ ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸಲಾಗಿದೆ. ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಎಂದು ಈ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಲ್ಲಿ ತಿಳಿಸಲಾಗಿದೆ ಎಂದರು.ಜಿಲ್ಲೆಯಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯನ್ನು ಜಾರಿಗೊಳಿಸಲು ವಿಜಯನಗರ ಜಿಲ್ಲೆಯ ಜಿಲ್ಲಾಮಟ್ಟದ ಸಮಿತಿ ರಚಿಸಿ ಆದೇಶಿಸಲಾಗಿದೆ. ಜಿಲ್ಲಾ ಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ರಾಜ್ಯ ಸಮಿತಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ಸಭೆಯಲ್ಲಿ ಜಿಪಂ ಸಿಇಒ ಸದಾಶಿವ ಪ್ರಭು ಬಿ., ಎಸ್ಪಿ ಶ್ರೀಹರಿಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಸಿದ್ದಲಿಂಗೇಶ ರಂಗಣ್ಣವರ ಹಾಗೂ ಸಮಿತಿಯ ಸದಸ್ಯರು ಇದ್ದರು.