ವ್ಯವಸ್ಥಿತ, ದೋಷ ರಹಿತ ಸ್ಪರ್ಧಾತ್ಮಕ ಪರೀಕ್ಷೆ ಜರುಗಿಸಲು ಸೂಚನೆ

| Published : Oct 27 2023, 12:30 AM IST

ವ್ಯವಸ್ಥಿತ, ದೋಷ ರಹಿತ ಸ್ಪರ್ಧಾತ್ಮಕ ಪರೀಕ್ಷೆ ಜರುಗಿಸಲು ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಗದಗ ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷ ರಹಿತವಾಗಿ, ವ್ಯವಸ್ಥಿತವಾಗಿ ಮತ್ತು ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರುನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆ ಜರುಗಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ವೈಶಾಲಿ ಎಂ.ಎಲ್‌. ಸಭೆ

ಗದಗ: ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷ ರಹಿತವಾಗಿ, ವ್ಯವಸ್ಥಿತವಾಗಿ ಮತ್ತು ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಮತ್ತು ಸುಗುಮವಾಗಿ ನಡೆಸಲು ಅನುವಾಗುವಂತೆ ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ಆಗದಂತೆ ಅಗತ್ಯಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಗದಿಪಡಿಸಿರುವ ಅಭ್ಯರ್ಥಿಗಳ ಸಂಖ್ಯೆಗೆ ಅನುಸಾರವಾಗಿ, ಪ್ರತಿ ೨೪ ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳಬೇಕು ಎಂದರು.

ಪ್ರತಿಯೊಬ್ಬ ಅಭ್ಯರ್ಥಿಯನ್ನು ಅವರುಗಳ ಗುರುತಿನ ಚೀಟಿಯೊಂದಿಗೆ ಪರಿಶೀಲಿಸಿ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ಅನುಮತಿಸುವುದು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು, ತೆಗೆದುಕೊಂಡು ಹೋಗುವಂತಿಲ್ಲ. ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ದಿನಗಳಂದು ಪರೀಕ್ಷೆಗೆ ಹಾಜರಾಗುವ ಹಾಗೂ ಗೈರು ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಆನಲೈನ್ ಮೂಲಕ ದಾಖಲಿಸಲು ಪರಿಕ್ಷಾ ಕೇಂದ್ರದ ಪ್ರಾಂಶುಪಾಲರುಗಳಿಗೆ ನಿರ್ದೇಶನ ನೀಡುವಂತೆ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲ್ಲಿರುವ ಪರೀಕ್ಷೆಗಳಿಗೆ ಸರ್ಕಾರದ ನಿರ್ದೇಶನದಂತೆ ರಾಜ್ಯವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅ. ೨೮ ಮತ್ತು ೨೯ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. ಅ. ೨೯ರಂದು ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯ ಮೊದಲನೆಯ ಪತ್ರಿಕೆ ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧೨.೩೦ ಹಾಗೂ ದ್ವಿತೀಯ ಪತ್ರಿಕೆಯು ಮಧ್ಯಾಹ್ನ ೨.೩೦ರಿಂದ ೪.೩೦ರ ವರೆಗೆ ನಡೆಯಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು, ನೋಡೆಲ್ ಅಧಿಕಾರಿಗಳು ಹಾಜರಿದ್ದರು.