ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

| Published : Jun 19 2024, 01:07 AM IST

ಸಾರಾಂಶ

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಂಗಳವಾರ ನಗರದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿಜಯಪುರ ನಗರದ ಕೆ.ಬಿ.ಎಸ್ ಶಾಲೆ ನಂ.೪ರಲ್ಲಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಂಗಳವಾರ ನಗರದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿಜಯಪುರ ನಗರದ ಕೆ.ಬಿ.ಎಸ್ ಶಾಲೆ ನಂ.೪ರಲ್ಲಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.

ನಗರದ ಪಿ.ಡಿ.ಜೆ ಪ್ರೌಢ ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ರ ಗಣಿತ ವಿಷಯದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಅಗತ್ಯ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿರುವ ಕುರಿತು, ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿವಿ ಅಳವಡಿಸಿರುವುದೂ ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಆರೋಗ್ಯ ಕಾರ್ಯಕರ್ತರ ನಿಯೋಜನೆ ಮಾಡಿರುವ ಕುರಿತು ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ಪ್ರಶಾಂತ ವಾತಾವರಣದಲ್ಲಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಪರೀಕ್ಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲೆಗೆ ಭೇಟಿ, ಪರಿಶೀಲನೆ:

ಜಿಪಂ ಸಿಇಒ ಅವರು ನಗರದ ಕೆ.ಬಿ.ಎಸ್. ಶಾಲೆ ನಂ.೦೪ ಭೇಟಿ ನೀಡಿ ಶಾಲಾ ಕೊಠಡಿ, ನೆಲಹಾಸು ವೀಕ್ಷಿಸಿದ ಅವರು, ಪ್ರಥಮಾದ್ಯತೆ ಮೇರೆಗೆ ಕೊಠಡಿಯ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸೂಚಿಸಿದರು. ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನು ಗುರುತಿಸಿ ವರದಿ ನೀಡಬೇಕು. ವಿದ್ಯುತ್ ಹಾಗೂ ಶೌಚಾಲಯ ವ್ಯವಸ್ಥೆ, ಶಾಲಾ ಕೊಠಡಿಗಳಿಗೆ ಸುಣ್ಣ-ಬಣ್ಣ ಹಾಗೂ ಶಾಲಾ ಕಾಂಪೌಂಡ್ ಗೋಡೆ ನಿರ್ಮಾಣ, ಅನವಶ್ಯಕ ಸಾರ್ವಜನಿಕರು ಶಾಲಾ ಆವರಣದೊಳಗಡೆ ಬರದಂತೆ ಕ್ರಮ ಕೈಗೊಳ್ಳಬೇಕು. ಶಾಲಾ ಶೌಚಾಲಯ ಹಾಗೂ ಶಾಲೆಯ ಒಳಾಂಗಣ ಮತ್ತು ಹೋರಾಂಗಣ ಆವರಣ ಸ್ವಚ್ಛತೆಗೆ ಕ್ರಮವಹಿಸಲು ವಿಜಯಪುರ ಮಹಾನಗರಪಾಲಿಕೆಯ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ತಕ್ಷಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ, ಆಹಾರ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಲು ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಇವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಲೆಯ ಸಮಸ್ಯೆ ಇದ್ದರೆ ಗಮನಕ್ಕೆ ತನ್ನಿ:

ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸುವದು ಹಾಗೂ ಈ ಶಾಲೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಕೂಡಲೇ ತಮ್ಮ ಗಮನಕ್ಕೆ ತರುವಂತೆಯೂ ಸಮಸ್ಯೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಶಾಲೆಯ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮಾದೇವಿ ಸೊನ್ನದ, ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮುಂತಾದವರು ಇದ್ದರು.

--

ಗಣಿತ ವಿಷಯದ ಪರೀಕ್ಷೆ: ೬೧೧ ವಿದ್ಯಾರ್ಥಿಗಳ ಗೈರು

ವಿಜಯಪುರ:

ಎಸ್ಸೆಸ್ಸೆಲ್ಸಿ ಪರೀಕ್ಷೆ-೨ರ ಗಣಿತ ವಿಷಯದಲ್ಲಿ ಜಿಲ್ಲೆಯ ಒಟ್ಟು ೩,೫೮೮ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ೨,೯೭೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೬೧೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.