ಆಸ್ಪತ್ರೆ ಸ್ವಚ್ಛವಾಗಿಡಲು ಸೂಚನೆ

| Published : Feb 09 2025, 01:15 AM IST

ಸಾರಾಂಶ

ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಸೂಚಿಸಿದ್ದಾರೆ. ನಿಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ಸಕಾಲದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದು ಗುಣಪಡಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಸೂಚಿಸಿದ್ದಾರೆ.

ಹಾಸನ ನಗರದ ಶ್ರೀ ಎಂ ಕೃಷ್ಣ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಅವರು ಆಸ್ಪತ್ರೆ ಆವರಣದಲ್ಲಿ ಇದ್ದಂತಹ ಮದ್ಯ ಸೇವನೆ ಮಾಡಿರುವ ಬಾಟಲಿಗಳು, ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಕೂಡಲೇ ವಿಲೇವಾರಿ ಮಾಡಿ ಆಸ್ಪತ್ರೆಯನ್ನು ಸದಾ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು. ಕಾಲಾವಧಿ ಮುಗಿದಿರುವ ಯಾವುದೇ ಔಷಧಗಳನ್ನು ಇಟ್ಟುಕೊಳ್ಳಬೇಡಿ. ಅದರ ಬಗ್ಗೆ ಮುತುವರ್ಜಿ ವಹಿಸುವಂತೆ ತಿಳಿಸಿದರು. ನಂತರ ಹೂವಿನಹಳ್ಳಿ ಕಾವಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಗೆ ಬಂದಿರುವ ರೋಗಿಗಳೊಂದಿಗೆ ಮಾತನಾಡಿ, ನಿಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ಸಕಾಲದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದು ಗುಣಪಡಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಸಲಹೆ ನೀಡಿದರು.

ಆಸ್ಪತ್ರೆಯ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದನ್ನು ಕಂಡು ಆಸ್ಪತ್ರೆಯ ಒಳಗಡೆ ಅವುಗಳು ಬರದಂತೆ ನೋಡಿಕೊಳ್ಳಲು ಆಸ್ಪತ್ರೆಯ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು ಅವರಿಗೆ ಆರೋಗ್ಯದ ಬಗ್ಗೆ ಯಾವ ರೀತಿ ಕಾಳಜಿವಹಿಸಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ಮಾಡಬೇಕು ಎಂದರು.

ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಬೇಕು ಎಂದು ಅವರು ಹೇಳಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು.