ಗಂಗಾವತಿ ನಗರದ ಭಾರತೀಯ ವೈದ್ಯಕೀಯ ಭವನದಲ್ಲಿ ಜರುಗಿದ ಜನ ಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಭಾಗವಹಿಸಿದ್ದರು.
ಗಂಗಾವತಿ: ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಹೇಳಿದರು.
ನಗರದ ಭಾರತೀಯ ವೈದ್ಯಕೀಯ ಭವನದಲ್ಲಿ ಜರುಗಿದ ಜನ ಸಂಪರ್ಕ ಸಭೆಯ ಅಧ್ಯಕ್ಷತೆತೆವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಜನರು ಹಾಗೂ ಪೊಲೀಸ್ ಇಲಾಖೆ ನಡುವೆ ಉತ್ತಮ ಬಾಂಧವ್ಯ ನಿರ್ಮಾಣವಾಗುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕಾರಿಯಾಗಲಿದೆ. ಸಾರ್ವಜನಿಕರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ ಮಾತನಾಡಿ, ಪೊಲೀಸ್ ಇಲಾಖೆ ಸಾರ್ವಜನಿಕರ ಸೇವೆಗಾಗಿ ಸದಾ ಸಿದ್ಧವಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆ ಎದುರಾದರೂ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸೈಬರ್ ಅಪರಾಧ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಮಾತನಾಡಿ, ಜನ ಸಂಪರ್ಕ ಸಭೆ ಕೇವಲ ಅಹವಾಲು ಸ್ವೀಕರಿಸುವ ಕಾರ್ಯಕ್ರಮವಲ್ಲ. ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆ ನಡುವೆ ನೇರ ಸಂಪರ್ಕ ಮತ್ತು ವಿಶ್ವಾಸವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಅವುಗಳ ಸ್ವರೂಪವನ್ನು ತಿಳಿದುಕೊಂಡು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪರಿಚಿತ ವ್ಯಕ್ತಿಗಳಿಗೆ ಬ್ಯಾಂಕ್ ಖಾತೆ ವಿವರ, ಒಟಿಪಿ, ಎಟಿಎಂ ಪಿನ್ ಹಾಗೂ ವೈಯಕ್ತಿಕ ಮಾಹಿತಿಗಳನ್ನು ನೀಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗುವ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.ನಗರ ಪೊಲೀಸ್ ಠಾಣೆಯ ಪಿಐ ಪ್ರಕಾಶ ಯಾತನ್ನೂರು, ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ರಂಗಪ್ಪ ಎಚ್. ದೊಡ್ಡಮನಿ, ಕನಕಗಿರಿ ಸಿಪಿಐ ಶಿವರಾಜ ಇಂಗಳಗಿ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಇಸ್ಮಾಯಿಲ್ ಉಪಸ್ಥಿತರಿದ್ದರು.