ಸಾರಾಂಶ
ಹಾವೇರಿ: ಜಿಲ್ಲಾಡಳಿತದಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಗಳ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಪೂರ್ವ ಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಮುಖಂಡರ ನಿರ್ಣಯದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ತಿಳಿಸಿದರು. ಆಮಂತ್ರಣಪತ್ರಿಕೆ, ವೇದಿಕೆ, ಆಸನ, ಕುಡಿಯುವ ನೀರು, ಉಪಾಹಾರ ವ್ಯವಸ್ಥೆ, ಉಪನ್ಯಾಸಕರ ಆಯ್ಕೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕುರಿತು ಸಮಾಜದ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.ಈ ಎಲ್ಲ ಮಹನೀಯರ ಜಯಂತಿಯನ್ನು ಎಲ್ಲ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿ, ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡುವಂತೆ ಆದೇಶ ಹೊರಡಲಿಸಲು ಸಮಾಜದ ಮುಖಂಡರು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಮಹನೀಯರ ಜಯಂತಿ ಆಚರಣೆಗೆ ಆದೇಶ ಹೊರಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಸಮಾಜದ ಮುಖಂಡರಿಗೆ ತಿಳಿಸಿದರು. ಜ.15ರಂದು ಅಂಬಿಗೌರ ಚೌಡಯ್ಯ ಜಯಂತಿಸಮಾಜದ ಮುಖಂಡರ ಮನವಿಯಂತೆ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಜ.15 ರಂದು ಬೆಳಿಗ್ಗೆ 11-30ಕ್ಕೆ ನರಸಿಂಹಪುರದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.ಸಮಾಜದ ಮುಂಡರ ಆಶಯದಂತೆ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಜ.20 ರಂದು ಹಾವೇರಿ ನಗರದ ಗಾಂಧಿ ಭವನದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.ಅದೇ ರೀತಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಕುರಿತು ಸಮಾಜ ಬಾಂಧವರು ಚರ್ಚಿಸಿ ದಿನಾಂಕವನ್ನು ನಂತರ ತಿಳಿಸಲಾಗುವುದು ಸಮಾಜದ ಮುಖಂಡರು ಸಭೆಗೆ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಅವರು ಕಾರ್ಯಕ್ರಮದ ರೂಪರೇಷೆಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಹಾವೇರಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಎಂ.ಮೈದೂರ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.