ಸಾರಾಂಶ
ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಶಾಲಾ-ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಹಾವೇರಿ: ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 3.0ನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 3.0ದ ಕುರಿತು ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಶಾಲಾ-ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು ಎಂದರು.ಬಸ್ ನಿಲ್ದಾಣ ಹಾಗೂ ಸಿನಿಮಾ ಥೇಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನೋಟೀಸ್ ನೀಡಬೇಕು. ಆರೋಗ್ಯ ಇಲಾಖೆ, ಪೊಲೀಸ್, ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರ ಡಾ. ಸಂತೋಷ ದಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 3.0 ಅಕ್ಟೋಬರ್ 18ರಿಂದ ಡಿಸೆಂಬರ್ 17ರ ವರೆಗೆ ಜರುಗಲಿದ್ದು, ಆರೋಗ್ಯ ಶಿಕ್ಷಣ, ಶಾಲಾ ಮಕ್ಕಳಿಂದ ಪ್ರಭಾತಫೇರಿ ಮೂಲಕ ಜಾಗೃತಿ, 400 ತಂಬಾಕು ಮುಕ್ತ ಶಾಲೆ, ಕನಿಷ್ಠ 30 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸುವುದು, ಗ್ರಾಪಂ ಮೂಲಕ ಸರಪಂಚರು ಮತ್ತು ಗ್ರಾಮ ಕಾರ್ಯಕರ್ತರಿಗೆ ವಿವಿಧ ಚಟುವಟಿಕೆ ಮೂಲಕ ಜಾಗೃತಿ ಮೂಡಿಸುವುದು, ಪೊಲೀಸ್ ಇಲಾಖೆ ಮೂಲಕ ಜಾಗೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ. ತಂಬಾಕು ಮುಕ್ತ ಯುವ ಅಭಿಯಾನ 3.0ರ ಕಾರ್ಯ ಚಟುವಟಿಕೆಯನ್ನು ಜಿಲ್ಲಾ ವೆಬ್‌ಸೈಟ್ ಹಾಗೂ ಅಧಿಕಾರಗಳ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ವ್ಯಾಪಕ ಪ್ರಚಾರ ಮಾಡಲು ಉದ್ದೇಶಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ಎಚ್.ವೈ. ಮೀಸೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಹಾವೇರಿ ಗ್ರಾಮೀಣ ವೃತ್ತ ಸಿಪಿಐ ಸಂತೋಷ ಪ್ರವಾರ, ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಇದ್ದರು.