ಸಾರಾಂಶ
ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಮಳೆಗಾಲ ತೀವ್ರವಾಗಿರುವುದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕ್ರಮವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿ ಮಾಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚರ್ಚೆ ನಡೆಸಿದರು.ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆಯೂ ತಿಳಿಸಿದರು.
* ಕಾಪು ಶಾಸಕರ ಸಭೆಕಾಪು ಶಾಸಕ ಸುರೇಶ್ ಶೆಟ್ಟಿ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಳೆಗಾಲದ ವಿಕೋಪಗಳ ನಿರ್ವಹಣೆಗೆ ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ವಿದ್ಯುತ್ ಅವಘಡ ತಪ್ಪಿಸಲು ರಸ್ತೆ ಇಕ್ಕೆಲಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಮತ್ತು ಅಪಾಯಕಾರಿ ಹಳೆಯ ವಿದ್ಯುತ್ ಕಂಬ - ತಂತಿಗಳನ್ನು ಬದಲಾಯಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಹಾಗೂ ಮುಖ್ಯ ರಸ್ತೆಗಳ ಚರಂಡಿಗಳನ್ನು ಹೂಳು ತೆಗೆದು ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಲ್ಲದೇ ಪುರಸಭಾ ವ್ಯಾಪ್ತಿಯಲ್ಲಿನ ಕೆರೆ ಹಾಗೂ ಮದಗಗಳಲ್ಲಿ ನೀರು ತುಂಬಿಕೊಂಡಿದ್ದು, ಅಪಾಯದ ಸೂಚನಾ ಫಲಕಗಳನ್ನು ಅಳವಡಿಸಬೇಕು, ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.