ಹಾವೇರಿ: ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆ ನೇರ ನೇಮಕಾತಿ ಲಿಖಿತ ಪರೀಕ್ಷೆ ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ ಹಾಗೂ ಸ್ಥಳೀಯ ವೃಂದದ ಪೊಲೀಸ್ ಕಾನಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪರೀಕ್ಷಾ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ ೩,೩೯೫ ಹಾಗೂ ಸ್ಥಳೀಯ ವೃಂದದ ೫೯೬ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ಆ. ೨ರಂದು ಜಿಲ್ಲೆಯ ೩೦ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಪರೀಕ್ಷೆ ಪ್ರಶ್ನೆಪತ್ರಿಕೆ ಸ್ವೀಕೃತಿ ಹಾಗೂ ವಿತರಣೆ ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಉಪನಿರ್ದೇಶಕರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಹಾಗೂ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡ ಒಂಭತ್ತು ತಂಡಗಳನ್ನು ರಚಿಸಲಾಗಿದೆ ಎಂದರು.

ಸಿಸಿ ಕ್ಯಾಮೆರಾ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್‌ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತಿಯುತವಾಗಿ ನಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬ್ಯಾಗ್ ಇಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.


ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್ ಮಾತನಾಡಿ, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ಮಾಡಲಾಗುತ್ತದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹಾದೇವಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ೧೦,೮೨೪ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಆ. ೨ರಂದು ಬೆಳಗ್ಗೆ ೧೦.೩೦ರಿಂದ ಮಧ್ಯಾಹ್ನ ೧೨ ಗಂಟೆ ವರೆಗೆ ಪರೀಕ್ಷೆ ಜರುಗಲಿದೆ ಎಂದು ಮಾಹಿತಿ ನೀಡಿದರು.

ಡಿವೈಎಸ್‌ಪಿ ಗಿರಿಮಲ್ಲಪ್ಪ ತಳಕಟ್ಟಿ ಉಪಸ್ಥಿತರಿದ್ದರು.

ಇಲೆಕ್ಟ್ರಾನಿಕ್ಸ್‌ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ಸ್‌ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೋಫೋನ್, ಪೇಜರ್, ವೈರ್‌ಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.

ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ: ನಿಗದಿಪಡಿಸಿದ ವಸ್ತ್ರ ಸಂಹಿತೆ (ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯೂ ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ (ಮೂಗುತಿ ಮತ್ತು ಮಂಗಳಸೂತ್ರ ಹೊರತುಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ತಿಳಿಸಿದರು.