ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ವಿಡಿಯೋ ಸಂವಾದ ಕೇಂದ್ರದಲ್ಲಿ ಬುಧವಾರ ಮಹತ್ವದ ಸಭೆ ನಡೆಸಿ ಅವರು ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ವಿಶೇಷ ಸಭೆ ನಡೆಸಬೇಕು. ಗ್ರಾಮಗಳಲ್ಲಿನ ಎಲ್ಲ ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮಗಳ ಬೋರ್‌ವೆಲ್‌ಗಳ ಸ್ಥಿತಿ, ಪ್ಲಾಂಟ್‌ಗಳ ಸಂಖ್ಯೆ, ಫ್ಲಷಿಂಗ್ ಕಾರ್ಯಗಳ ಪ್ರಗತಿ, ಪೈಪ್‌ಲೈನ್‌ಗಳ ಅಳವಡಿಕೆ, ಪಂಪ್ ಮತ್ತು ಮೋಟಾರ್ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದ ಅವರು, ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಹೊಸ ಬೋರ್‌ವೆಲ್‌ಗಳಿಗೆ ಅನುಮೋದನೆ ನೀಡುವುದು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ವಿವಿಧ ಯೋಜನೆಗಳ ಪ್ರಗತಿ ಕುರಿತು ವಿವರವಾದ ಚರ್ಚೆ ನಡೆಯಿತು. ಕಾರ್ಯನಿರ್ವಹಿಸುತ್ತಿರುವ, ಕಾರ್ಯನಿರ್ವಹಿಸದ ಹಾಗೂ ಜೆಜೆಎಂ ಅಡಿಯಲ್ಲಿ ಪ್ರಸ್ತಾಪಿತ, ತೋಡಿದ, ಆಳವಡಿಸಿದ ಮತ್ತು ಪರೀಕ್ಷೆಗೊಂಡ ಬೋರ್‌ವೆಲ್‌ಗಳ ಒಟ್ಟು ಸಂಖ್ಯೆಯನ್ನು ಕುರಿತು ವಿಚಾರಿಸಲಾಯಿತು.ಖಾಸಗಿ ಟ್ಯಾಂಕರ್‌ಗಳು ಮತ್ತು ಖಾಸಗಿ ಬೋರ್‌ವೆಲ್‌ಗಳಿಗೆ ಸಂಬಂಧಿಸಿದ ಪಾವತಿಗಳಲ್ಲಿ ಯಾವುದಾದರೂ ಬಾಕಿ ಇರುವುದರ ಬಗ್ಗೆ ಚರ್ಚಿಸಲಾಯಿತು. ಇಂದಿನವರೆಗೆ ಟಾಸ್ಕ್ ಫೋರ್ಸ್ ಸಭೆಗಳು ನಡೆದಿರುವ ಮಾಹಿತಿ ಹಾಗೂ ಕಳುಹಿಸಿದ ಬೋರ್‌ವೆಲ್ ಪ್ರಸ್ತಾವನೆಗಳ ವಿವರಗಳನ್ನು ಪರಿಶೀಲಿಸಿದರು. ಎಲ್ಲಾ ತಾಲೂಕುಗಳಲ್ಲಿ ಇಂದಿನವರೆಗೆ ಓವರ್‌ಹೆಡ್ ಟ್ಯಾಂಕ್‌ಗಳ ಸ್ವಚ್ಛತೆಗೆ ಸಂಬಂಧಿಸಿದ ವಿವರವನ್ನು ಪರಿಶೀಲಿಸಿದರು. ಖಾಸಗಿ ಸಂಸ್ಥೆಗಳ ಮೂಲಕ ನಿರ್ವಹಿಸಲಾಗುತ್ತಿರುವ ಪ್ಲಾಂಟ್‌ಗಳಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಹಾಗೂ ಎಷ್ಟು ಕಾರ್ಯನಿರ್ವಹಿಸದ ಸ್ಥಿತಿಯಲ್ಲಿವೆ ಎಂಬುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ವಿವಿಧ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಹಾಗೂ ವಿವಿಧ ವಿಭಾಗ ಮಟ್ಟದ ಅಧಿಕಾರಿಗಳು ಹಾಜರಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು ಭಾಗವಹಿಸಿದ್ದರು.