ಕನ್ನಡಪ್ರಭ ವಾರ್ತೆ ಕೆಂಭಾವಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮ್ ಲೀಲಾ ಮೈದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳಿದ ನಂತರ, ಅವರು ಕುಳಿತಿದ್ದ ಮತ್ತು ಕಾರ್ಯಕ್ರಮ ನಡೆಸಿದ ಸ್ಥಳವನ್ನು ಸ್ವಚ್ಛಗೊಳಿಸಿರುವುದು ಅತ್ಯಂತ ಅವಮಾನಕರ ಸಂಗತಿಯಾಗಿದೆ ಎಂದು ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ವಿರುಪಾಕ್ಷ ಗುಡಿಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ದೇಶದ ಹಿರಿಯ ರಾಜಕೀಯ ನಾಯಕ ಹಾಗೂ ದಲಿತ ಸಮುದಾಯದ ಪ್ರತಿನಿಧಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂತಹ ಅವಮಾನ ಮಾಡಿರುವುದು ಖಂಡನೀಯ. ಜಾತಿ ಆಧಾರಿತ ಬೇಧಭಾವ ಮತ್ತು ಅಸ್ಪೃಶ್ಯತೆಯ ಮನೋಭಾವವನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಸಂವಿಧಾನವು ಎಲ್ಲ ನಾಗರಿಕರಿಗೂ ಸಮಾನತೆ, ಸ್ವಾಭಿಮಾನ ಮತ್ತು ಗೌರವದ ಹಕ್ಕನ್ನು ನೀಡಿದೆ. ಆದರೆ, ಒಬ್ಬ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸ್ಥಳವನ್ನು ಶುದ್ಧೀಕರಿಸಿರುವ ಘಟನೆ ನಿಜವಾಗಿ ದ್ದರೆ, ಇದು ಸಂವಿಧಾನದ ಆಶಯಗಳಿಗೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಘಟನೆಯ ಕುರಿತು ಸಂಬಂಧಿಸಿದ ಅಧಿಕಾರಿಗಳು ತಕ್ಷಣ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.