ಸಾರಾಂಶ
ಗದಗ: ದೇಶದ ಪ್ರಧಾನ ಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಮುಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ. 24ರಂದು ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಗಜೇಂದ್ರಗಡದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆಯಲ್ಲಿ ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾ ದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿದಂತೆ, ನಮ್ಮಲ್ಲೂ ಜನ ಪ್ರಧಾನಿ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ಹೇಳಿದ್ದಾರೆ. ಇದು ರಾಷ್ಟ್ರ ವಿರೋಧಿ ಹೇಳಿಕೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಚೋದನಾತ್ಮಕ ಹೇಳಿಕೆ. ಈ ರೀತಿಯಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದನ್ನು ಗಮನಿಸಿದರೆ ಸರ್ಕಾರವೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದಂತೆ ಕಂಡುಬರುತ್ತಿದೆ. ರಾಜ್ಯಾದ್ಯಂತ ಸಚಿವರು, ಕಾಂಗ್ರೆಸ್ ಶಾಸಕರ ಮುಂದಾಳತ್ವದಲ್ಲಿ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಹಾಗೂ ಪ್ರಧಾನಮಂತ್ರಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ತುಂಬಾ ಖೇದಕರ ಎಂದು ಹೇಳಿದ್ದಾರೆ.
ಸಾಂವಿಧಾನಿಕ ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ಅಪಪ್ರಚಾರ ನಡೆಸುವುದು ಸರಿಯಲ್ಲ. ಕಾನೂನು ಸುವ್ಯವಸ್ಥೆ ಹಾಳುಮಾಡುತ್ತಿರುವ ಕಾಂಗ್ರೆಸ್, ರಾಜ್ಯದಲ್ಲಿ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದೆ. ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ.ಎಸ್. ಪಾಟೀಲ ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ವಿಸರ್ಜಿಸಿ, ಕರ್ನಾಟಕದಲ್ಲಿ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ರಾಜ್ಯದ ಜನ ಹಿತ ಕಾಪಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.ವಿಪ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.