ಸಾರಾಂಶ
ಮಂಗಳೂರು : ರಾಜ್ಯದಲ್ಲಿ ಸುಸ್ಥಿರ ಮೂಲಸೌಕರ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತಹ ಆಕರ್ಷಕ ನಗರಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಮಂಗಳೂರು ನಗರದ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಳೆಯ ಸಿಂಚನದ ನಡುವೆ ಮಂಗಳೂರು ನೆಹರೂ ಮೈದಾನದಲ್ಲಿ ಗುರುವಾರ ನಡೆದ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 130 ಕೋಟಿ ರು. ಅನುದಾನ ಒದಗಿಸಲಾಗಿದ್ದು, 320 ಕಾಮಗಾರಿಗಳ ಕ್ರೀಯಾ ಯೋಜನೆ ತಯಾರಿಸಲಾಗಿದೆ. ಮಹತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ 2,000 ಕೋಟಿ ರು.ಅನುದಾನ ಒದಗಿಸಲು ನಿಶ್ಚಯಿಸಲಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಗೆ 200 ಕೋಟಿ ರು. ಅನುದಾನ ಹರಿದುಬರಲಿದೆ ಎಂದು ಸಚಿವರು ಹೇಳಿದರು.
ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 700 ಕಾಮಗಾರಿಗಳು ಮಂಜೂರಾಗಿದ್ದು, 531 ಕಾಮಗಾರಿಗಳು ಪೂರ್ಣಗೊಂಡಿವೆ. ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 5 ರು. ಪ್ರೋತ್ಸಾಹಧನ ನೀಡಲಾಗಿತ್ತಿದೆ. ಜಿಲ್ಲೆಯ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯ ಮತ್ತು ಉನ್ನತಿಕರಣಕ್ಕಾಗಿ 19 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ 3,534 ಜನರಿಗೆ ಉಚಿತ ಇಸಿಜಿ ನಡೆಸಲಾಗಿದ್ದು, 61 ಜನರಿಗೆ ಉನ್ನತ ಮಟ್ಟದ ಚಿಕಿತ್ಸೆ ಒದಗಿಸಲಾಗಿದೆ ಎಂದರು.
2024 ನೇ ಸಾಲಿನ ಮುಂಗಾರು ಅವಧಿಯನ್ನು ಜಿಲ್ಲಾಡಳಿತ ವತಿಯಿಂದ ಸಮರ್ಪಕವಾಗಿ ನಿರ್ವಹಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದೂವರೆಗೂ ವಾಡಿಕೆಗಿಂತ ಶೇ.14 ಹೆಚ್ಚು ಮಳೆಯಾಗಿದೆ. ಒಟ್ಟು 1.21 ಕೋಟಿ ರು. ಪರಿಹಾರವನ್ನು ಮನೆಹಾನಿ ಸಂತ್ರಸ್ತ ಫಲಾನುಭವಿಗಳಿಗೆ ಪಾವತಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 53 ಕೋಟಿ ರು. ವೆಚ್ಚದಲ್ಲಿ 12 ಮಾಡ್ಯುಲರ್ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಒಳಗೊಂಡ ಹೊಸ ಸರ್ಜಿಕಲ್ ಬ್ಲಾಕ್ ನಿರ್ಮಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ 35 ಹಾಸಿಗೆಗಳ ಡಯಾಲಿಸಿಸ್ ಕೇಂದ್ರ, ಜೀರಿಯಾಟ್ರಿಕ್ ವಾರ್ಡ್. ಕ್ಯಾಥ್ ಲಾಬ್ ನಿರ್ಮಾಣ ಪ್ರಗತಿಯಲ್ಲಿದೆ. ಇದಲ್ಲದೆ, 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ ಮಂಜೂರು ಮಾಡಲಾಗಿದೆ ಎಂದರು.
ಇದಕ್ಕೂ ಮುನ್ನ ಪೊಲೀಸ್ ವಾದ್ಯವೃಂದ, ಸಂಚಾರಿ ಪೊಲೀಸ್, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಆರ್‌ಎಸ್‌ಪಿ ಬಾಲಕ- ಬಾಲಕಿಯರ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳ ತಂಡ ಸೇರಿದಂತೆ ಒಟ್ಟು 16 ತಂಡಗಳಿಂದ ಸಚಿವರು ಗೌರವರಕ್ಷೆ ಸ್ವೀಕರಿಸಿದರು. ವಿದ್ಯಾರ್ಥಿಗಳು, ಪೊಲೀಸ್ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಸಚಿವರು ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಮೇಯರ್ ಸುಧೀರ್ ಶೆಟ್ಟಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪಶ್ಚಿಮ ವಲಯ ಐಜಿಪಿ ಬೋರಲಿಂಗಯ್ಯ, ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್,ಜಿ.ಪಂ. ಸಿಇಒ ಡಾ. ಆನಂದ್ ಮತ್ತಿತರರಿದ್ದರು.
ಬಳಿಕ ಪುರಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಭಾರತ ಸೇವಾದಳ ಪ್ರಥಮ
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಪಥಸಂಚಲನದಲ್ಲಿ ಭಾರತ ಸೇವಾದಳ ತಂಡ ಪ್ರಥಮ ಸ್ಥಾನ ಹಾಗೂ ಆರ್‌ಎಸ್.ಪಿ ಬಾಲಕಿಯರ ತಂಡ ದ್ವಿತೀಯ ಸ್ಥಾನದೊಂದಿಗೆ ರೋಲಿಂಗ್ ಶೀಲ್ಡ್‌ಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಧಿಕ ಅಂಕ ಗಳಿಸಿದವರಿಗೆ ಬಹುಮಾನ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೌಲಾನಾ ಅಬುಲ್ ಕಲಾಂ ಆಝಾದ್ ಪ್ರತಿಭಾ ಪುರಸ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಗೌರವ, ಡೆಂಘೀ ನಿಯಂತ್ರಣದ ಕುರಿತು ರೀಲ್ಸ್ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಾಂಗ್ಲಾ ಹಿಂದುಗಳ ರಕ್ಷಣೆಗೆ ಕೇಂದ್ರ ಕ್ರಮಕ್ಕೆ ಆಗ್ರಹ
ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಗಳು ಭಾರತೀಯರಾದ ನಮ್ಮೆಲ್ಲರಿಗೂ ಅತಿಯಾದ ಗಾಬರಿಯನ್ನು ತರಿಸಿದೆ. ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದರು.
ಭಾರತ ಸೇರಿದಂತೆ ಜಗತ್ತಿನಾದ್ಯಂತ ಅಲ್ಪಸಂಖ್ಯಾತರ ರಕ್ಷಣೆಯು ಬಹುಸಂಖ್ಯಾತ ಜನರ ಕರ್ತವ್ಯವೆಂದು ಭಾವಿಸಬೇಕು. ಸಕಲ ಮಾನವ ಸಂಕುಲ ಶಾಂತಿ ಮತ್ತು ಸೌಹಾರ್ದತೆಯಿಂದ ಬಾಳಲಿ ಎಂಬುದು ನಮ್ಮ ಸಂಕಲ್ಪ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.