ಕುಂದಾಪುರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂಬ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದರೂ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗದ ಹಿನ್ನೆಲೆಯಲ್ಲಿ ಸಾವಿರಾರು ರೈತರು ಶುಕ್ರವಾರ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಭೇಟಿ ನೀಡಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೊನೆಗೊಂಡಿತು.

ಕಳೆದ ಒಂದು ವರ್ಷದಿಂದ ಮನವಿ, ಧರಣಿ ಹಾಗೂ ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನ ಸೆಳೆಯಲು ರೈತರು ನಿರಂತರ ಪ್ರಯತ್ನ ನಡೆಸಿದ್ದರು. ಆದರೂ ನ್ಯಾಯ ದೊರೆಯದ ಹಿನ್ನೆಲೆಯಲ್ಲಿ ಈ ‘ಬಾರಿ ಮಾಡು ಇಲ್ಲವೇ ಮಡಿ’ ಎಂಬ ಘೋಷಣೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬೈಂದೂರು ಜಂಕ್ಷನ್ ತಲುಪಿದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರವಾಣಿ ಮೂಲಕ ಸಂಪರ್ಕಿಸಿ ಜಿಲ್ಲಾಧಿಕಾರಿಯೊಂದಿಗೆ ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಪಾದಯಾತ್ರೆಯ ಮೂಲಕ ತಾಲೂಕು ಆಡಳಿತ ಸೌಧದ ಎದುರು ಸೇರಿದರು.

ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು. ಆದರೆ ಇದರಿಂದ ಸಮಾಧಾನಗೊಳ್ಳದ ರೈತರು ಜಿಲ್ಲಾಧಿಕಾರಿಯೇ ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು.

ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವಂತೆ ರೈತರ ನಿಯೋಗಕ್ಕೆ ಅವಕಾಶ ಕಲ್ಪಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು.ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮಾತನಾಡಿ, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವ ನಾಯಕರು ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದ್ದಾರೆ. ಒಂದು ವರ್ಷದ ಈ ಹೋರಾಟ ರಾಜ್ಯಕ್ಕೇ ಮಾದರಿಯಾಗಿದೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ರೈತರನ್ನು ಇಷ್ಟು ದಿನ ಕಾಯಿಸಿರುವುದು ಸರಿಯಲ್ಲ. ಹೋರಾಟದಿಂದ ಮಾತ್ರ ನ್ಯಾಯ ದೊರೆಯುತ್ತದೆ ಎಂದು ಹೇಳಿದರು.ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗಗಳ ಹಕ್ಕು ಉಳಿಸಿಕೊಳ್ಳಲು ಸಾವಿರಾರು ರೈತರು ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ನ್ಯಾಯ ದೊರೆತಿಲ್ಲ. ನ್ಯಾಯ ಸಿಗದೆ ಸ್ಥಳದಿಂದ ಹಿಂದಿರುಗುವುದಿಲ್ಲ ಎಂದು ಎಚ್ಚರಿಸಿದರು.


ತಹಸೀಲ್ದಾರ್ ರವಿರಾಜ್ ದೀಕ್ಷಿತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪತ್ರಕರ್ತ ಅರುಣ್ ಕುಮಾರ್ ಶಿರೂರು ಸ್ವಾಗತಿಸಿದರು. ವೀರಭದ್ರ ಗಾಣಿಗ ನಿರೂಪಿಸಿದರು.

ನ್ಯಾಯ ಒದಗಿಸುವ ಭರವಸೆ: ಪ್ರತಿಭಟನೆ ವಾಪಸ್‌: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು. ಜಿಲ್ಲಾಧಿಕಾರಿ ಭರವಸೆ ಬಳಿಕ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಹಸೀಲ್ದಾರ್‌ ರವಿರಾಜ್ ದೀಕ್ಷಿತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಮುಖಂಡ ಅರುಣ್ ಕುಮಾರ್ ಶಿರೂರು, ವೀರಭದ್ರ ಗಾಣಿಗ, ಪದ್ಮಾಕ್ಷ ಗೋಳಿಬೇರು, ಗಣಪ ಗಂಗನಾಡು, ಸುಭಾಷ್ ಗಂಗನಾಡು, ಹೆರಿಯ ಪೂಜಾರಿ ಗೋಳಿಬೇರು, ನಾಗಪ್ಪ ಮರಾಠಿ ಹೊಸೂರು, ವಾಸುದೇವ ಮರಾಠಿ, ಕೇಶವ ಅಂತಾರ್, ಮಹಾದೇವ ಪೂಜಾರಿ ಕಿಸ್ಮತಿ, ಲಿಮೋನ್ ಅತ್ಯಾಡಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.