ಸಾರಾಂಶ
ಚಾಮರಾಜನಗರ: ಜಿಲ್ಲೆಯ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ಪರೀಕ್ಷೆಗಳನ್ನು ತೀವ್ರಗೊಳಿಸಿ, ಪ್ರಕರಣಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ನೀಡಲು ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಾದ ಕ್ಷಯ, ರಕ್ತನಿಧಿ, ಎಚ್ಐವಿ, ಹೈಪಟೈಟಿಸ್, ಸಿಕಲ್ ಸೆಲ್ ನಿಯಂತ್ರಣ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಂಕು ಇರುವ ವ್ಯಕ್ತಿಯು ಸೀನಿದಾಗ, ಕೆಮ್ಮಿದಾಗ ಕ್ಷಯ ಇತರರಿಗೆ ಹರಡುವ ಸಂಭವ ಹೆಚ್ಚಾಗಿರುತ್ತದೆ. ಕ್ಷಯರೋಗಿಗಳನ್ನು ಪತ್ತೆಹಚ್ಚಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಶೇ.85ರಷ್ಟು, ನಗರ ಪ್ರದೇಶಗಳಲ್ಲಿ ಶೇ.50ರಷ್ಟು ಕ್ಷಯರೋಗಿಗಳಿದ್ದಾರೆ. ಗ್ರಾಪಂ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಕ್ಷಯ ಪತ್ತೆಗೆ ಗುರಿ ನಿಗದಿಪಡಿಸಿ ಆಯಾ ತಾಲೂಕು ವೈದ್ಯಾಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಕ್ಷಯಮುಕ್ತ ಗ್ರಾಪಂಯನ್ನಾಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಹನೂರು ಹಾಗೂ ಕೊಳ್ಳೇಗಾಲ ತಾಲೂಕುಗಳಲ್ಲಿ ಇತರೆ ತಾಲೂಕುಗಳಿಗಿಂತ ಹೆಚ್ಚಿನ ಕ್ಷಯರೋಗಿಗಳಿರುವುದು ಕಂಡುಬಂದಿದೆ. ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಕ್ಷಯ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಜಾಗೃತಿ ಹಮ್ಮಿಕೊಳ್ಳಬೇಕು. ಶಾಲಾಮಟ್ಟದಲ್ಲಿ ನಡೆಯುವ ಪೋಷಕರ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಬೇಕು. ಜಿಲ್ಲೆಯ ಎಲ್ಲಾ ಗ್ರಾಪಂಗಳಿಗೆ ಗ್ರಾಮ ಆರೋಗ್ಯ ಕಿಟ್ ನೀಡಲಾಗಿದ್ದು, ಇವುಗಳ ಸದ್ಭಳಕೆಯಾಗಬೇಕು. ಒಟ್ಟಿನಲ್ಲಿ ಕ್ಷಯ ಪತ್ತೆಗೆ ಸೂಕ್ಷ್ಮ ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಷಯರೋಗ ಪತ್ತೆ ಕಾರ್ಯದ ಪ್ರಗತಿ ಚರ್ಚಿಸಲು ಪ್ರತಿ ತಿಂಗಳು 20ರಂದು ಸಭೆ ಆಯೋಜಿಸಬೇಕು. ಮುಂದಿನ ಆರು ತಿಂಗಳೊಳಗೆ ಶೇ. 50ರಷ್ಟು ಗ್ರಾಪಂಗಳಲ್ಲಿ ಕ್ಷಯರೋಗಿಗಳ ಪತ್ತೆ ಕಾರ್ಯ ಪೂರ್ಣಗೊಳಿಸಬೇಕು. ಉತ್ತಮ ಪ್ರಗತಿ ಸಾಧಿಸುವ ಪಂಚಾಯಿತಿ ಅಧಿಕಾರಿಗಳನ್ನು ಗುರುತಿಸಿ ಪ್ರಮಾಣಪತ್ರ ನೀಡಿ ಅಭಿನಂದಿಸುವ ಕೆಲಸವಾಗಬೇಕು. ಕ್ಷಯಮುಕ್ತ ಗ್ರಾಪಂಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪರಿಗಣಿಸಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.ಎಚ್ಐವಿ ಏಡ್ಸ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ಕ್ರೀನಿಂಗ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. 2008ರಲ್ಲಿ ಜಿಲ್ಲೆಯಲ್ಲಿ ಎಚ್ಐವಿ ಸರಾಸರಿ ಶೇ.4.2ರಷ್ಟಿತ್ತು. ಪ್ರಸ್ತುತ 0.23ಕ್ಕೆ ಇಳಿದಿದೆ. ಸೋಂಕಿತ ತಾಯಿಯಿಂದ ಮಗುವಿಗೆ ಎಚ್ಐವಿ ಹರಡದಂತೆ ವೈದ್ಯರು ನಿಗಾವಹಿಸಬೇಕು. ಎಚ್ಐವಿ ಪೀಡಿತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ನರೇಗಾ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ನೋಂದಾಯಿಸುವ ಕೆಲಸ ತ್ವರಿತವಾಗಿ ಆಗಬೇಕು. ಎಚ್ಐವಿ ಪೀಡಿತರಿಗೆ ನೆರವಾಗುತ್ತಿರುವ ಸ್ವಯಂಸೇವಾ ಸಂಸ್ಥೆಗಳಿಗೆ ಎನ್ಆರ್‌ಎಲ್ಎಂ ಸಹಯೋಗ ಒದಗಿಸಬೇಕು ಎಂದರು.
ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಬಸವರಾಜೇಂದ್ರ ಆಸ್ಪತ್ರೆ ಹಾಗೂ ಕೊಳ್ಳೇಗಾಲದ ಹೋಲಿಕ್ರಾಸ್ ಆಸ್ಪತ್ರೆಗಳಲ್ಲಿ ರಕ್ತನಿಧಿ ಕೇಂದ್ರಗಳಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 2493 ಯೂನಿಟ್ ರಕ್ತ ಸಂಗ್ರಹಿಸಲಾಗಿದೆ. ರಕ್ತ ಸಂಗ್ರಹವನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಡಲು ಜಿಲ್ಲಾಡಳಿತ ಭವನದ ಎಲ್ಲಾ ಅಧಿಕಾರಿ, ಸಿಬ್ಬಂದಿ, ಪದವಿ ಕಾಲೇಜುಗಳು, ಶಿಕ್ಷಕರ ಸಂಘ, ಗ್ರಾಮಲೆಕ್ಕಾಧಿಕಾರಿಗಳ ಸಂಘಗಳಿಗೆ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ ಶಿಬಿರ ಏರ್ಪಡಿಸಬೇಕು. ರೋಟರಿ, ಲಯನ್ಸ್ ಸೇರಿದಂತೆ ಇತರೆ ಸಂಘಸಂಸ್ಥೆಗಳ ನೆರವನ್ನು ಪಡೆಯಬೇಕು ಎಂದು ಹೇಳಿದರು. ಸಿಕೆಲ್‌ಸೆಲ್ ನಿಯಂತ್ರಣ ಸಂಬಂಧ ರಾಜ್ಯ ನಿರ್ದೇಶನದನ್ವಯ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಸೋಲಿಗ, ಬೆಟ್ಟಕುರುಬ, ಜೇನುಕುರುಬ ಹಾಗೂ ಯರವಾ ಸಮುದಾಯಗಳ ಆದಿವಾಸಿಗಳಿಗೆ ಸಿಕಲ್ ಸೆಲ್ ಕಾಯಿಲೆ 14,470 ಜನರನ್ನು ಪರೀಕ್ಷೆಗೊಳಪಡಿಸಲಾಗಿದ್ದು, 65 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಸಿಕೆಲ್ ಸೆಲ್ ಖಚಿತವಾಗಿ 40 ಮಂದಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ನಾಯಕ, ಮೇದ, ಹಕ್ಕಿಪಿಕ್ಕಿ ಸೇರಿದಂತೆ ಪರಿಶಿಷ್ಟ ಸಮುದಾಯದ ಜನರನ್ನು ಪರೀಕ್ಷೆಗೊಳಿಸುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.ಇದೇ ವೇಳೆ ಕ್ಷಯರೋಗದಿಂದ ಗುಣಮುಖರಾದವರನ್ನು ಜಿಲ್ಲಾಧಿಕಾರಿ ಆತ್ಮೀಯತೆಯಿಂದ ಮಾತನಾಡಿಸಿ, ಅವರೊಂದಿಗೆ ಸಂವಾದ ನಡೆಸಿದರು.ಜಿಪಂ ಸಿಇಒ ಮೋನಾ ರೋತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ರವಿಕುಮಾರ್, ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಬಿಂದ್ಯಾ, ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.