ಸಾರಾಂಶ
ಮನೆ ಮನೆ ಜಾಗೃತಿ ಮೂಡಿಸಲು ಕರೆ । ಕೈಮರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ । ಅಧಿಕಾರಿಗಳಿಂದ ಮಾಹಿತಿ ಸಂಗ್ರಹ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಡೆಂಘೀ ಜ್ವರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಅವುಗಳ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ಕ್ರಮ ವಹಿಸಬೇಕೆಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೈಮರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಡೆಂಘೀ ಜ್ವರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಹೈರಿಸ್ಕ್ ಪ್ರದೇಶಗಳನ್ನು ಗುರುತಿಸಿ, ಡೆಂಘೀ ಮತ್ತು ಚಿಕನ್‌ಗುನ್ಯಾ ರೋಗ ಹರಡದಂತೆ ಲಾರ್ವಾ ಸಮೀಕ್ಷೆ ನಡೆಸುವಂತೆ ತಿಳಿಸಿದ ಅವರು, ಪ್ರತಿ ಮನೆ ಮನೆಗಳಿಗೂ ತೆರಳಿ ಡೆಂಘೀ ನಿಯಂತ್ರಣದ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಪ್ರತಿ ಗ್ರಾಮಗಳಲ್ಲಿ ಫಾಗಿಂಗ್ ಮಾಡುವಂತೆ ಹಾಗೂ ಚರಂಡಿಯನ್ನು ಸ್ವಚ್ಛಗೊಳಿಸು ವಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.ಸಂಶಯಾಸ್ಪದ ಜ್ವರ ಪ್ರಕರಣಗಳನ್ನು ಗುರುತಿಸಿ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕು, ಗ್ರಾಮ ದಲ್ಲಿನ ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಐಇಸಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಕರಪತ್ರ, ಭಿತ್ತಿಪತ್ರಗಳ ಮೂಲಕ ಕೂಡ ಜಾಗೃತಿ ಮೂಡಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಮನೆ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮಾಹಿತಿ ನೀಡಿ ಎಂದರು.ಸ್ಥಳ ಪರಿಶೀಲನೆ: ಜಿಲ್ಲೆ ಪ್ರವಾಸಿ ತಾಣಗಳಿಗೆ ಪ್ರಸಿದ್ಧಿಯಾಗಿದ್ದು, ಇಲ್ಲಿನ ಮುಳ್ಳಯ್ಯನಗಿರಿ, ಬಾಬಾ ಬುಡನ್‌ಗಿರಿ ಹಾಗೂ ಇನ್ನಿತರ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ವಾಹನ ದಟ್ಟನೆ ನಿಯಂತ್ರಿಸುವ ನಿಟ್ಟಿ ನಲ್ಲಿ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಪರಿಶೀಲನೆ ನಡೆಸಿದರು.
ಗಿರಿ ಪ್ರದೇಶದ ಸ್ವಚ್ಛತೆ ಕಾಪಾಡಲು ಪ್ಲಾಸ್ಟಿಕ್ ಬಳಕೆ ಈಗಾಗಲೇ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಪ್ರವಾಸಿಗರು ಸ್ವಚ್ಛತೆಗೆ ಗಮನಹರಿಸಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಸಾಕಬಾರದು, ಪಾರ್ಕಿಂಗ್ ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಬಾಲಕೃಷ್ಣ ಹಾಜರಿದ್ದರು.
11 ಕೆಸಿಕೆಎಂ 5ಚಿಕ್ಕಮಗಳೂರು ಸಮೀಪದ ಕೈಮರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಗುರುವಾರ ಭೇಟಿ ನೀಡಿ ಡೆಂಘೀ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಡಿಎಚ್‌ಒ ಡಾ. ಅಶ್ವತ್‌ಬಾಬು ಇದ್ದರು.