ಗ್ರಾಮೀಣ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯಾಗಿಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದ್ದು, ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಸ್ಥಳೀಯ ಉತ್ಪನ್ನಗಳನ್ನು ಜನತೆ ಖರೀದಿಸಬೇಕು. ಆ ಮೂಲಕ ಇಂತಹ ಉದ್ಯಮಶೀಲತೆಗೆ ಪ್ರೋತ್ಸಾಹಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

- ಗ್ರಾಮೀಣ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯಾಗಿಸುವ ಸಂಕಲ್ಪಕ್ಕೆ ಡಾ.ಪ್ರಭಾ ಮನವಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಗ್ರಾಮೀಣ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯಾಗಿಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದ್ದು, ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಸ್ಥಳೀಯ ಉತ್ಪನ್ನಗಳನ್ನು ಜನತೆ ಖರೀದಿಸಬೇಕು. ಆ ಮೂಲಕ ಇಂತಹ ಉದ್ಯಮಶೀಲತೆಗೆ ಪ್ರೋತ್ಸಾಹಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ನಗರದ ಎಸ್.ಎಸ್. ಮಾಲ್ ಎದುರು ಬುಧವಾರ ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ– ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ ವಿಶೇಷ ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ದೀಪಾವಳಿ ಬೆಳಕಿನ ಹಬ್ಬ. ಇಂತಹ ಬೆಳಕಿನ ಹಬ್ಬದಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮಣ್ಣಿನ ದೀಪ, ಅಲಂಕಾರಿಕ ವಸ್ತುಗಳನ್ನು ಖರೀದಿಸಿ ಮನೆಗಳನ್ನು ಬೆಳಗಿಸುವ ಜೊತೆಗೆ ಆ ಮಹಿಳೆಯರ ಬದುಕಿನಲ್ಲೂ ಆರ್ಥಿಕ ಭರವಸೆಯ ಬೆಳಕನ್ನು ಮೂಡಿಸಬೇಕು. ಮಹಿಳೆಯರ ಶ್ರಮಕ್ಕೆ ಸೂಕ್ತ ಮಾರುಕಟ್ಟೆ ಒದಗಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯೂ ಆಗಿದೆ ಎಂದು ತಿಳಿಸಿದರು.

ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಸ್ವಸಹಾಯ ಸಂಘಗಳ ಮಹಿಳೆಯರು ಒಗ್ಗೂಡಿ ಮಣ್ಣಿನ ದೀಪ, ಅಲಂಕಾರಿಕ ದೀಪ ಸೇರಿದಂತೆ ದೀಪಾವಳಿಗೆ ಅಗತ್ಯ ವೈವಿಧ್ಯಮಯ ಉತ್ಪನ್ನಗಳನ್ನು ತಯಾರಿಸಿದ್ದಾರೆ. ಇಂತಹ ಉತ್ಪನ್ನಗಳ ಮಾರಾಟಕ್ಕೆ ನಗರದ ಪ್ರಮುಖ ಸ್ಥಳಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಸ್‌.ಎಸ್‌. ಮಾಲ್ ಎದುರು, ರೈಲು ಮತ್ತು ಬಸ್ಸು ನಿಲ್ದಾಣದ ಬಳಿ ಉತ್ಪನ್ನ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ ಎಂದು ಅವರು ಹೇಳಿದರು.

ದಾವಣಗೆರೆಯ ಬಿ.ಎಸ್. ಚನ್ನಬಸಪ್ಪ ಮಳಿಗೆ ಎದುರು ಶನಿವಾರವೂ ವಿಶೇಷ ಮಾರಾಟ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಬೇಕು. ರಾಜ್ಯ ಸರ್ಕಾರವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ವಿವಿಧ ಸ್ವಯಂ ಉದ್ಯೋಗಗಳಿಗೆ ಅಗತ್ಯ ಕೌಶಲ್ಯ ತರಬೇತಿ, ಆರ್ಥಿಕ ನೆರವು ಒದಗಿಸುತ್ತಿದೆ. ಈ ಸೌಲಭ್ಯಗಳನ್ನು ಬಳಸಿ ಮಹಿಳೆಯರು ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.

ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಇಂತಹ ಮೇಳಗಳು ಆದಾಯ ವೃದ್ಧಿಗೆ ಸಹಕಾರಿಯಾಗಲಿವೆ. ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಕುಟುಂಬದ ಆರ್ಥಿಕ ಸ್ಥಿತಿಯೂ ಸುಧಾರಿಸುತ್ತದೆ. ಆ ಮಹಿಳೆಯರ ಪರಿಶ್ರಮಕ್ಕೆ ಸಾರ್ವಜನಿಕರ ಬೆಂಬಲ ದೊರೆತರೆ ಗ್ರಾಮೀಣ ಭಾಗದಲ್ಲಿ ಮತ್ತಷ್ಟು ಉದ್ಯೋಗ ಅವಕಾಶ ಸೃಷ್ಟಿಯಾಗಲು, ಗ್ರಾಮೀಣರ ಬದುಕು ಒಂದಿಷ್ಟು ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.

ಜಿಪಂ ಸಿಇಒ ಸಾಹಿತ್ಯ ಎಂ. ಆಲದಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ.ಶೇಖರ್ ಇತರರು ಇದ್ದರು. ಜಿಲ್ಲಾಡಳಿತ, ಜಿಪಂ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕಾರಿಗಳು, ಸಿಬ್ಬಂದಿಯ ಕಾರ್ಯವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಶ್ಲಾಘಿಸಿದರು. ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ್ದ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿ, ಆ ಮಹಿಳೆಯರೊಂದಿಗೆ ಸಂವಾದ ನಡೆಸಿ, ಉದ್ಯಮಶೀಲ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸಂತಸದ ದೀಪಾವಳಿ ಹಬ್ಬದ ಆಚರಿಸಲು ಕಿವಿಮಾತು ಹೇಳಿ, ಹಬ್ಬಕ್ಕೆ ಎಲ್ಲರಿಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಶುಭ ಹಾರೈಸಿದರು.

- - -

-4ಕೆಡಿವಿಜಿ4: ದಾವಣಗೆರೆಯಲ್ಲಿ ಬುಧವಾರ ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ ವಿಶೇಷ ಮಾರಾಟ ಮೇಳವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. ಜಿಪಂ ಸಿಇಒ, ಜಿಲ್ಲಾ ಎಸ್ಪಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.