ಸಾರಾಂಶ
ಯುವ ಸಮುದಾಯ ಕ್ರೀಡೋತ್ಸಾಹ ಬೆಳೆಸಲೆಂದೇ ಈ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಯೋಜಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಯುವ ಸಮುದಾಯ ಕ್ರೀಡೋತ್ಸಾಹ ಬೆಳೆಸಲೆಂದೇ ಈ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಯೋಜಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ನಗರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ದಸರಾ ಉತ್ಸವ ಅಂಗವಾಗಿ ಆಯೋಜಿಸಿದ್ದ ಮಿನಿ ಮ್ಯಾರಥಾನ್‌ಗೆ ಬಾವುಟ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ತುಮಕೂರು ಜಿಲ್ಲೆ ಮೊದಲಿನಿಂದಲೂ ಕ್ರೀಡೆಗಳಿಗೆ ಖ್ಯಾತಿ ಹೊಂದಿದೆ. ಜಿಲ್ಲೆಯಲ್ಲಿ ಹಲವಾರು ಮಂದಿ ರಾಷ್ಟ್ರೀಯ ಕ್ರೀಡಾಪಟುಗಳಿದ್ದಾರೆ. ಕ್ರೀಡಾಸಕ್ತರಿಗೆ ಪೂರಕವಾಗಿಯೇ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣವನ್ನು ಸುಮಾರು 58 ಕೋಟಿ ರು. ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗಿದೆ. ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಹಮ್ಮಿಕೊಳ್ಳುವ ಪೂರ್ವದಲ್ಲಿ ಈ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಿರುವುದು ಗುಣಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲು ಸಹಕಾರಿಯಾಗಿದೆ ಎಂದರು. ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದಲ್ಲಿ ಕಳೆದ ಒಂಭತ್ತು ದಿನಗಳ ಕಾಲ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ನಮ್ಮ ಸಂಸ್ಕೃತಿಯನ್ನು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮುನ್ನೆಡೆಸುವುದು ದಸರಾ ವಿವಿಧ ಕಾರ್ಯಕ್ರಮಗಳ ಉದ್ದೇಶವಾಗಿದೆ. ಮಾನಸಿಕ ದೃಢತೆಯಷ್ಟೆ ದೈಹಿಕ ಸದೃಢತೆ ಮುಖ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತಿದೆ. ದೈಹಿಕ ಸಾಮರ್ಥ್ಯ ಬಲಗೊಳ್ಳಲು ಪ್ರತಿಯೊಬ್ಬರೂ ಆಟೋಟಗಳಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಸುಸ್ಥಿರತೆ ಕಾಪಾಡಿಕೊಳ್ಳಬಹುದಾಗಿದೆ ಎಂದರು.ಮಿನಿ ಮ್ಯಾರಾಥಾನ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಆರಂಭವಾಗಿ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅಂತ್ಯವಾಯಿತು. ಪುರಷರ ವಿಭಾಗದಲ್ಲಿ ೧೦ ಕಿ.ಮೀ ಹಾಗೂ ಮಹಿಳೆಯರ ವಿಭಾಗದಲ್ಲಿ 6 ಕಿ.ಮೀ ಓಟ ಇದ್ದು, ಆರು ಸ್ಥಾನಗಳ ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು.ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.