ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರಗು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

| Published : Sep 30 2024, 01:26 AM IST / Updated: Sep 30 2024, 12:48 PM IST

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರಗು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟರ್ಮಿನಲ್ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸಲಿದೆ. ಈ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ: ನಗರದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಟರ್ಮಿನಲ್‌ ಅಂತಾರಾಷ್ಟ್ರೀಯ ಮೆರುಗು ನೀಡಲಿದೆ. ಮತ್ತಷ್ಟು ಮೇಲ್ದರ್ಜೆ ಸೌಲಭ್ಯ ಒದಗಿ ಬರಲಿವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಪಥ ವೇಗ ಪಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಭಾನುವಾರ ಇಲ್ಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿಯ ಪ್ರಗತಿ ವೀಕ್ಷಣೆ ನಡೆಸಿ, ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಸುಮಾರು ₹273 ಕೋಟಿ ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಟರ್ಮಿನಲ್‌ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅಭಿವೃದ್ಧಿ ಪಡಿಸುತ್ತಿದ್ದು, ಈಗಾಗಲೇ ಕಾಮಗಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಟೆಂಡ‌ರ್ ಕರೆಯಲಾಗುವುದು ಎಂದರು.

ಸದ್ಯಕ್ಕೆ 4 ವಿಮಾನಗಳು ನಿಲ್ಲುವ ಸ್ಥಳವಿದ್ದು, ಅದನ್ನೀಗ ಸುಮಾರು 10 ಏರ್‌ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶಕ್ಕೆ ವಿಸ್ತರಿಸಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 2024ರ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹273 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಈಗ ಕಾಮಗಾರಿ ವೇಗ ಪಡೆಯುತ್ತಿದೆ. ಈ ಕಾಮಗಾರಿಗೆ ಸಮ್ಮತಿ ನೀಡಿ ಕೈಗೆತ್ತಿಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಹು-ಧಾ ಮಹಾನಗರ ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ ಸೇರಿದಂತೆ ವಿಮಾನ ನಿಲ್ದಾಣದ ಸಿಬ್ಬಂದಿ ಇದ್ದರು.