ಸವಣೂರು: ತಾಲೂಕು ಆಡಳಿತ ಹಾಗೂ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಈ ಬಾರಿ ವಿಶ್ವ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದು ತಹಸೀಲ್ದಾರ್ ರವಿಕುಮಾರ ಕೊರವರ ತಿಳಿಸಿದರು.
ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾ. 10ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಡಾ. ವಿ.ಕೃ. ಗೋಕಾಕ ಸಾಂಸ್ಕೃತಿಕ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನ ವಿವಿಧ ಇಲಾಖೆಗಳ ಮಹಿಳಾ ನೌಕರರ ಸೇವೆಯನ್ನು ಗುರುತಿಸಿ, ಅವರ ಪರಿಶ್ರಮ ಮತ್ತು ಸಮರ್ಪಣೆಯನ್ನು ಸಾರ್ವಜನಿಕವಾಗಿ ಗೌರವಿಸುವ ಉದ್ದೇಶದಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳಿಂದ ನಾಮ ನಿರ್ದೇಶನಗೊಂಡ ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಲಾಗುವುದು.ವಿಶ್ವ ಮಹಿಳಾ ದಿನಾಚರಣೆ ಕೇವಲ ಆಚರಣೆಯಾಗೆ ಸೀಮಿತವಾಗದೇ, ಮಹಿಳೆಯರ ಸಾಮರ್ಥ್ಯ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಬದ್ಧತೆ ಪ್ರತಿಬಿಂಬಿಸುವ ವೇದಿಕೆಯಾಗಬೇಕೆಂಬ ದೃಷ್ಟಿಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆ ಆಯೋಜಿಸಲಾಗುತ್ತಿದೆ. ಆಯ್ದ ಕ್ರೀಡೆಗಳಲ್ಲಿ ವಿಜೇತರಾಗುವ ಮಹಿಳೆಯರಿಗೆ ಆಕರ್ಷಕ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಇದೇ ವೇಳೆ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಸಾಧಕಿಯರನ್ನು ಸನ್ಮಾನಿಸಲಾಗುವುದು ಎಂದರು.
ಮಾ. 10ರಂದು ಸವಣೂರಿನಲ್ಲಿ ಜರಗುವ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದ ವೇದಿಕೆಯಲ್ಲಿ ನನ್ನನ್ನು ಒಳಗೊಂಡು, ಜನಪ್ರತಿನಿಧಿಗಳು ಸಹ ಇರುವುದಿಲ್ಲ. ಕೇವಲ ಮಹಿಳೆಯರಿಗಾಗಿ ವೇದಿಕೆಯಲ್ಲಿ ಆಸನ ಕಾಯ್ದು ಇರಿಸಲಾಗುವುದು ಎಂದು ತಹಸೀಲ್ದಾರ್ ರವಿಕುಮಾರ ಕೊರವರ ಹೇಳಿದರು.ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರೇಡ್ 2 ತಹಸೀಲ್ದಾರ್ ಗಣೇಶ ಸವಣೂರ, ಬಿಸಿಎಂ ಇಲಾಖೆ ಸಹಾಯಕ ನಿರ್ದೇಶಕಿ ಸುಲೋಚನ ಕಟ್ನೂರ, ಸಿಡಿಪಿಒ ಉಮಾ ಕೆ.ಎಸ್., ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ತಾಲೂಕು ಸರ್ಕಾರಿ ನೌಕರರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಐ.ಎಸ್. ಹಿರೇಮಠ ನಿರ್ವಹಿಸಿದರು.