ಸಂಸತ್ತಿನ ಕಾರ್ಯಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸಿದ ಅನುಭವವನ್ನು ಹಂಚಿಕೊಂಡ ಸಚಿವರು, ಸಂಸದೀಯ ವ್ಯವಸ್ಥೆಯ ಬಗ್ಗೆ ತಮಗೆ ವಿಶೇಷ ಆಸಕ್ತಿ ಇದೆ ಎಂದು ತಿಳಿಸಿದರು. ಸಂಸತ್ತಿನಲ್ಲಿ ನಡೆಯುವ ಚರ್ಚೆಗಳು, ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪಿಸುವ ರೀತಿ ಹಾಗೂ ಜನರ ಹಿತದೃಷ್ಟಿಯಿಂದ ವಿಷಯಗಳನ್ನು ಮಂಡಿಸುವ ವಿಧಾನವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಯುವ ಪೀಳಿಗೆಗೆ ಸಂಸತ್ತಿನ ಕಾರ್ಯವೈಖರಿ, ಚರ್ಚೆಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಸಂಸದೀಯ ವ್ಯವಸ್ಥೆಯ ಬಗ್ಗೆ ಆಸಕ್ತಿ ಮೂಡಿ, ಭವಿಷ್ಯದಲ್ಲಿ ಅವರು ಸಂಸದೀಯ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.ನಗರದ ವೆಂಕಟೇಶ್ವರ ಕಲಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಂಸತ್ತಿನ ಕಾರ್ಯಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸಿದ ಅನುಭವವನ್ನು ಹಂಚಿಕೊಂಡ ಸಚಿವರು, ಸಂಸದೀಯ ವ್ಯವಸ್ಥೆಯ ಬಗ್ಗೆ ತಮಗೆ ವಿಶೇಷ ಆಸಕ್ತಿ ಇದೆ ಎಂದು ತಿಳಿಸಿದರು. ಸಂಸತ್ತಿನಲ್ಲಿ ನಡೆಯುವ ಚರ್ಚೆಗಳು, ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪಿಸುವ ರೀತಿ ಹಾಗೂ ಜನರ ಹಿತದೃಷ್ಟಿಯಿಂದ ವಿಷಯಗಳನ್ನು ಮಂಡಿಸುವ ವಿಧಾನವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.ಯುವ ಸಂಸತ್ತು ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಕೇವಲ ಭಾಷಣ ಮಾಡುವ ವೇದಿಕೆಯಾಗಬಾರದು. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳುವುದು, ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವುದು, ವಿವಿಧ ಅಭಿಪ್ರಾಯಗಳನ್ನು ಆಲಿಸುವುದು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಜಾಸತ್ತಾತ್ಮಕ ವಿಧಾನವನ್ನು ಕಲಿಸುವ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು.ಸಂಸತ್ತಿನ ಕಲಾಪಗಳನ್ನು ವೀಕ್ಷಿಸುವುದರಿಂದ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿಗಳ ಕುರಿತು ಸ್ಪಷ್ಟ ಅರಿವು ಮೂಡುತ್ತದೆ. ಈ ಹಿನ್ನೆಲೆಯಲ್ಲಿ ಯುವ ಸಂಸತ್ತು ಕಾರ್ಯಕ್ರಮವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು. ಕಸ್ತೂರಬಾ ಗೋಶಾಲೆಯಲ್ಲಿ ಕಾರ್ಯಕ್ರಮ ನಡೆಸಿ, ಸಾರ್ವಜನಿಕರೂ ವೀಕ್ಷಿಸಲು ಅನುಕೂಲವಾಗುವಂತೆ ಗ್ಯಾಲರಿ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಸದೀಯ ವ್ಯವಸ್ಥೆಯ ಕುರಿತು ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.ತಹಸೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಯುವ ಸಂಸತ್ತು ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಪ್ರಜಾಪ್ರಭುತ್ವದ ವ್ಯವಸ್ಥೆ, ಸಂವಿಧಾನದ ಆಶಯಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಅತಿಯಾಗಿ ಸಮಯ ಮೀಸಲಿಡುವ ಬದಲು ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ದಿನನಿತ್ಯದ ವಿದ್ಯಮಾನಗಳು, ಸಾಮಾಜಿಕ ಸಮಸ್ಯೆಗಳು ಹಾಗೂ ದೇಶದ ಆಗುಹೋಗುಗಳ ಕುರಿತು ತಿಳಿದುಕೊಳ್ಳಬೇಕು. ಇದರಿಂದ ಸಾಮಾನ್ಯ ಜ್ಞಾನ ವೃದ್ಧಿಯಾಗುವುದರ ಜತೆಗೆ ಸಮಾಜದ ಬಗ್ಗೆ ಜವಾಬ್ದಾರಿಯುತ ದೃಷ್ಟಿಕೋನ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸಭೆ ಅಥವಾ ಸಂಸತ್ತಿನಲ್ಲಿ ಮಾತನಾಡುವಾಗ ಅವರ ವಿಚಾರಗಳನ್ನು ಗಮನಿಸುವುದು ಮುಖ್ಯ. ರೈತರ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಜನಪ್ರತಿನಿಧಿಗಳು ಹೇಗೆ ಧ್ವನಿ ಎತ್ತುತ್ತಾರೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅವರಲ್ಲಿರುವ ನಾಯಕತ್ವದ ಗುಣಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಧರ್ಮಶೇಖರ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಮಹತ್ವ ನೀಡಿದೆ. ಸಮಾಜದ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವುದು ಹಾಗೂ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಆಶಯದಂತೆ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡುವುದನ್ನು ಸಚಿವರು ಪಾಲಿಸುತಿದ್ದಾರೆ.ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ನೇತೃತ್ವದಲ್ಲಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ ಅವರು, ಬರಪೀಡಿತ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅರಸೀಕೆರೆಯನ್ನು ನೀರಾವರಿ ಸೌಲಭ್ಯಗಳಿರುವ ತಾಲೂಕನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಪ್ರಯತ್ನಗಳನ್ನು ಉಲ್ಲೇಖಿಸಿದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪರಶೈವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು