ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ಅಕ್ರಮ ನಡೆದಿದ್ದು, ಕೂಡಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾನಪರಿಷತ್‌ ಸಚೇತಕ ಎನ್‌.ರವಿಕುಮಾರ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಕಾರಣರಾಗಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಮಾಡಿಕೊಂಡ ವೇಳೆ ಇದೇ ಕಾಂಗ್ರೆಸ್‌ ಪಕ್ಷ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ರಾಜ್ಯಾದ್ಯಂತ ಪ್ರತಿಭಟಿಸಿ ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಈಗ ಅವರ ಸಂಪುಟದ ಸಚಿವರ ವಿರುದ್ಧವೇ ಅಕ್ರಮ ಅವ್ಯವಹಾರ ಆರೋಪದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಇಬ್ಬರು ನಾಯಕರು ಏಕೆ ರಾಜೀನಾಮೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ಬಿಜೆಪಿ ಮುಖಂಡರಾದ ಗುತ್ತಿಗೆನೂರು ವಿರುಪಾಕ್ಷ ಗೌಡ, ರಾಮಲಿಂಗಪ್ಪ, ಸಾಧನ ಹಿರೇಮಠ, ಎಚ್‌.ಹನುಮಂತಪ್ಪ, ಡಾ.ಎಸ್‌.ಜೆ.ವಿ. ಮಹಿಪಾಲ್‌, ಉಡೇದ ಸುರೇಶ, ಸುಗುಣಾ, ನಾಗವೇಣಿ, ವಿಜಯಲಕ್ಷ್ಮಿ ಇದ್ದರು.

ಇಲ್ಲಿನ ಕನಕದುರ್ಗಮ್ಮ ದೇವಸ್ಥಾನದಿಂದ ಡಿಸಿ ಕಚೇರಿಯವರೆಗೆ ರ್‍ಯಾಲಿ ನಡೆಸಿ, ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಅವರಿಗೆ ಮನವಿ ಸಲ್ಲಿಸಿದರು. ನಗರದ ರಾಯಲ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸಚಿವ ಬಿ.ನಾಗೇಂದ್ರ ಅವರ ಭಾವಚಿತ್ರದ ಪ್ರತಿಕೃತಿ ದಹನ ಮಾಡಿದರು. ಕೆಲವು ಪ್ರತಿಭಟನಾನಿರತ ಕಾರ್ಯಕರ್ತರು ಟೈರ್‌ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದರು.

"ನೂರಾರು ಕೋಟಿ ದರೋಡೆ ಮಾಡಿದ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ಕ್ರೈಂ ಕರ್ನಾಟಕವನ್ನು ಆವರಿಸಿದೆ, ಕಾಂಗ್ರೆಸ್‌ ಪಕ್ಷವನ್ನು ಕೊನೆಗಾಣಿಸೋಣ, ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಇರಲಿ, ನಿಲ್ಲಿಸಿ ನಿಲ್ಲಿಸಿ ಅಧಿಕಾರಿ ಮೇಲೆ ದಬ್ಬಾಳಿಕೆ ನಿಲ್ಲಿಸಿ " ಎಂಬ ಪೋಸ್ಟರ್‌ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಲಾಯಿತು.