ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಹೆರಿಗೆ ಸಂದರ್ಭಗಳು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ.
ಬ್ಯಾಡಗಿ: ಮನುಷ್ಯ ಇಂದು ಕೃತಕ ಬುದ್ಧಿಮತ್ತೆ (ಎಐ) ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾನೆ. ಆದರೆ, ಮನುಷ್ಯನ ಜೀವ ಉಳಿಸುವ ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ, ಪ್ರತಿಯೊಬ್ಬರೂ ಯಾವುದೇ ಆತಂಕಕ್ಕೆ ಒಳಗಾಗದೆ ವರ್ಷಕ್ಕೆ ಕನಿಷ್ಠ ಎರಡು ಬಾರಿ ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸಲು ಮುಂದಾಗಬೇಕು ಎಂದು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಗಂಟಿಸಿದ್ದಪ್ಪನವರ ಹೇಳಿದರು.
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯುವ ರೆಡ್ಕ್ರಾಸ್ ಘಟಕ, ಹಾಗೂ ರಾಣೆಬೆನ್ನೂರ ಬಸವೇಶ್ವರ ರಕ್ತ ಕೇಂದ್ರದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಹೆರಿಗೆ ಸಂದರ್ಭಗಳು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಮಯದಲ್ಲಿ ರಕ್ತದ ಕೊರತೆಯಿಂದ ಯಾವುದೇ ಜೀವಕ್ಕೆ ಅಪಾಯವಾಗಬಾರದು. ಆರೋಗ್ಯವಂತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಸಿದ್ದಲಿಂಗಪ್ಪ ಕರಿಯಣ್ಣನವರ ಮಾತನಾಡಿ, ರಕ್ತದಾನವು ಕೇವಲ ದಾನವಲ್ಲ, ಅದು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ರಕ್ತದಾನದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿಗಳು ರಕ್ತದಾನದ ಮಹತ್ವವನ್ನು ಅರಿತುಕೊಂಡು, ಸಮಾಜದಲ್ಲಿ ಇತರರಿಗೂ ಪ್ರೇರಣೆಯಾಗಬೇಕು. ರಕ್ತದಾನದಿಂದ ದೇಹದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆಗಳನ್ನು ಬದಿಗಿಟ್ಟು, ವೈದ್ಯರ ಸಲಹೆ ಮತ್ತು ಮಾರ್ಗದರ್ಶನದೊಂದಿಗೆ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ಶಿಬಿರದಲ್ಲಿ ಒಟ್ಟು 50 ಯುನಿಟ್ ರಕ್ತ ಸಂಗ್ರಹ ಮಾಡಲಾಯಿತು, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.