ಬಳ್ಳಾರಿ: ಶಿಸ್ತು ಮತ್ತು ನಿರಂತರ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ ಎಂದು ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲ ಸಚಿವ ಪ್ರೊ.ಎನ್.ಎಂ. ಸಾಲಿ ತಿಳಿಸಿದರು.

ತಾಲೂಕಿನ ಮೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ತಾತ್ಕಾಲಿಕ ಮನೋರಂಜನೆ, ಸಾಮಾಜಿಕ ಜಾಲತಾಣಗಳು ಹಾಗೂ ಸಮಯ ವ್ಯರ್ಥ ಮಾಡುವ ಚಟುವಟಿಕೆಯತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿ ಜೀವನ ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಸಮಯವನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯ ಉಜ್ವಲವಾಗಲಿದೆ. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು, ಶಿಸ್ತು, ಸಮಯಪ್ರಜ್ಞೆ ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಂಡರೆ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾಲೇಜು ಪ್ರಾಂಶುಪಾಲ ಡಾ. ಬಿ. ಸರೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಡಾ. ಬಿ.ಜಿ. ಕಲಾವತಿ ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯಗುರು ನಾರಾಯಣಪ್ಪ ಮಾತನಾಡಿದರು. ಕಚೇರಿ ಅಧೀಕ್ಷಕಿ ಸಾವಿತ್ರಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾಲೇಜಿನಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅತಿಹೆಚ್ಚು ಅಂಕ ಪಡೆದ ಬಿ.ಎ. ಮತ್ತು ಬಿ.ಕಾಂ. ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜಶಾಸ್ತ್ರ ಉಪನ್ಯಾಸಕ ಡಾ. ಟಿ. ಬಸವರಾಜ್ ಹಾಗೂ ವಿದ್ಯಾರ್ಥಿನಿ ಪೂಜಿತಾ ನಿರ್ವಹಿಸಿದರು. ಮೋಕಾ ಗ್ರಾಮದ ಮುಖಂಡರು ಹಾಗೂ ಶಿಕ್ಷಣ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.