ಸಂವಿಧಾನದ ಮೂಲ ರಚನೆಯಲ್ಲಿಯೇ ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಗಣರಾಜ್ಯ ವ್ಯವಸ್ಥೆ ಹಾಗೂ ಸಾರ್ವಭೌಮ ರಾಷ್ಟ್ರ ನಿರ್ಮಾಣದ ಆಶಯದೊಂದಿಗೆ ಇತರೆ ರಾಷ್ಟ್ರಗಳ ಸಂವಿಧಾನಕ್ಕಿಂತಲೂ ಶ್ರೇಷ್ಠವೆನಿಸಿದೆ. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಯ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುತ್ತದೆ. ಇಂತಹ ಮಹತ್ವದ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಈಡೇರಿಸಬೇಕು. ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನೀಡಿದೆ. ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು. 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದಿತು. 2015ರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯ ಅಂಗವಾಗಿ ನವೆಂಬರ್ 26ಅನ್ನು ಸಂವಿಧಾನ ಸಮರ್ಪಣಾ ದಿನವೆಂದು ಘೋಷಿಸಲಾಯಿತು. ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಎರಡು ವರ್ಷ, ಹನ್ನೊಂದು ತಿಂಗಳು ಹಾಗೂ ಹದಿನೆಂಟು ದಿನಗಳ ಅವಧಿಯಲ್ಲಿ ಸಂವಿಧಾನ ರಚನೆಯಾಯಿತು. ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಮಹತ್ವದ ಸಂವಿಧಾನವಾಗಿದ್ದು, ಪ್ರಜೆಗಳಿಗೆ ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಸಮಾನ ಅವಕಾಶ, ಧಾರ್ಮಿಕ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸಿದೆ ಎಂದರು.
ಸಂವಿಧಾನದ ಮೂಲ ರಚನೆಯಲ್ಲಿಯೇ ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಗಣರಾಜ್ಯ ವ್ಯವಸ್ಥೆ ಹಾಗೂ ಸಾರ್ವಭೌಮ ರಾಷ್ಟ್ರ ನಿರ್ಮಾಣದ ಆಶಯದೊಂದಿಗೆ ಇತರೆ ರಾಷ್ಟ್ರಗಳ ಸಂವಿಧಾನಕ್ಕಿಂತಲೂ ಶ್ರೇಷ್ಠವೆನಿಸಿದೆ. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಯ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುತ್ತದೆ. ಇಂತಹ ಮಹತ್ವದ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಈಡೇರಿಸಬೇಕು. ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ವಾಚನ ಮಾಡಲಾಯಿತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಕೆ. ರವಿಕುಮಾರ್, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಡಿವೈಎಸ್ಪಿ ಸ್ನೇಹರಾಜ್, ತಹಸೀಲ್ದಾರ್ ನವೀನ್ ಕುಮಾರ್, ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.