ಸಾರಾಂಶ
ಕನ್ನಡಪ್ರಭ ವಾರ್ತೆ ಶಿಕಾರಿಪುರ
ಕನ್ನಡ ನಾಡಿನ ಆಸ್ಮಿತೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕರೆ ನೀಡಿದರು.ಇಲ್ಲಿನ ತಾಪಂ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಸಹಿತ ವಿವಿಧ ಇಲಾಖೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಯುವಕ ಸಂಘ ಮತ್ತಿತರ ಸಂಘಟನೆಗಳ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಹೋರಾಟ ಮಾಡುವ ಮೂಲಕ ಕನ್ನಡ ನಾಡು, ನುಡಿ ಉಳಿಸುವಲ್ಲಿ ಸಾಹಿತಿಗಳು ಹಾಗೂ ಹೋರಾಟಗಾರ ಶ್ರಮ ಶ್ಲಾಘನೀಯವಾಗಿದೆ ಎಂದರು.ಕನ್ನಡ ನಾಡು, ನುಡಿ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ. ಅನ್ಯಭಾಷೆಯ ವ್ಯಾಮೋಹ ತೊರೆದು ಪ್ರತಿಯೊಬ್ಬರು ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು. ನಮ್ಮ ಮಾತೃಭಾಷೆ ಕನ್ನಡದ ಬಗ್ಗೆ ಮಕ್ಕಳಲ್ಲಿ ಅಭಿಮಾನ ಬೆಳೆಸಬೇಕು ಎಂದು ಸಲಹೆ ನೀಡಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಮಲ್ಲೇಶ್.ಬಿ.ಪೂಜಾರ್ ಮಾತನಾಡಿ, ಭಾಷೆಗಳ ಆಧಾರದ ಮೇಲೆ ರಾಜ್ಯಗಳು ವಿಂಗಡಣೆಯಾಗಿದೆ. ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ನಾವು ಇಂದು ಸ್ಮರಿಸಬೇಕಾಗಿದೆ. ದೈನಂದಿನ ಚಟುವಟಿಕೆಗಳಲ್ಲಿ ಕನ್ನಡವನ್ನು ಬಳಸುವ ಮೂಲಕ ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ರಘು ಮಾತನಾಡಿ, ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ಮಾತೃಭಾಷೆಯನ್ನು ಸ್ಪಷ್ಟವಾಗಿ ಬರೆಯುವುದು ಹಾಗೂ ಓದುವುದನ್ನು ಕಲಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ. ಶಿಕಾರಿಪುರ ತಾಲೂಕಿನಲ್ಲಿ ಪ್ರಥಮ ಕನ್ನಡ ಸಾಮ್ರಾಜ್ಯ ಸ್ಥಾಪಕ ಮಯೂರವರ್ಮ, ಶೂನ್ಯ ಸಿಂಹಾಸನಾಧೀಶ ಅಲ್ಲಮಪ್ರಭು ಹಾಗೂ ಮಹಿಳಾ ವಚನಗಾರ್ತಿ ಅಕ್ಕಮಹಾದೇವಿ ಜನಿಸಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಪುರಸಭಾಧ್ಯಕ್ಷೆ ಶೈಲಾ ಮಡ್ಡಿ, ಮುಖ್ಯಾಧಿಕಾರಿ ಭರತ್, ಡಿವೈಎಸ್‌ಪಿ ಕೆ.ಇ.ಕೇಶವ್, ಸಿಪಿಐ ಆರ್.ಆರ್. ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ, ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ, ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಹಿರೇಮಠ್, ಪ್ರಶಾಂತ್, ರವಿಕುಮಾರ್, ಮಂಜುನಾಥ್, ಬಾಲರಾಜ್ ಉಪಸ್ಥಿತರಿದ್ದರು.