ಹುತಾತ್ಮ ಪೊಲೀಸರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ

| Published : Oct 22 2025, 01:03 AM IST

ಹುತಾತ್ಮ ಪೊಲೀಸರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಲ್ಲಿಸಿ ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೧೯೫೯ರಲ್ಲಿ ಸಿಯಾಚಿನ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ದಾಳಿಯಿಂದ ಮೃತಪಟ್ಟವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸುವುದರ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ದೇಶದೊಳಗಿನ ಕಾನೂನು ಸುವ್ಯವಸ್ಥೆ ಪಾಲನೆ, ನಾಗರೀಕರ ಆಸ್ತಿ ಪಾಸ್ತಿ ರಕ್ಷಣೆ, ಅಪರಾಧ ತಡೆ ಹೀಗೆ ಹತ್ತು ಹಲವಾರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಲ್ಲಿಸಿ ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೧೯೫೯ರಲ್ಲಿ ಸಿಯಾಚಿನ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ದಾಳಿಯಿಂದ ಮೃತಪಟ್ಟವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸುವುದರ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಹುತಾತ್ಮರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ತಿಳಿಸಿದರಲ್ಲದೆ, ಬಂದೋಬಸ್ತ್ ಮತ್ತಿತರ ಕರ್ತವ್ಯದ ಮೇಲೆ ೨೪x೭ ಸಮಯ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕುಟುಂಬ ಹಾಗೂ ವೈಯಕ್ತಿಕವಾಗಿಯೂ ಗಮನಹರಿಸಲು ಸಾಧ್ಯವಾಗುವುದಿಲ್ಲ, ಇವರ ಸೇವಾ ಭದ್ರತೆ ಬಗ್ಗೆ ಹೆಚ್ಚಿನ ಗಮನಹರಿಸುವ ಅಗತ್ಯತೆ ಇದೆ ಎಂದರು.

ದೇಶ, ಸಮಾಜಕ್ಕಾಗಿ ಬಲಿದಾನ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕುಟುಂಬದವರ ಬೆಂಬಲ ಇಲ್ಲದಿದ್ದರೆ ತಮ್ಮ ಕರ್ತವ್ಯ ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ. ಆ ಕಾರಣಕ್ಕಾಗಿ ಅವರ ಕುಟುಂಬ ವರ್ಗದವರಿಗೂ ದೊಡ್ಡ ನಮನ ಸಲ್ಲಿಸುತ್ತೇನೆ ಎಂದರು. ಸರ್ಕಾರಿ ಸೇವೆ ಬಗ್ಗೆ ಅಭಿಮಾನ ನಿಷ್ಠೆ ಇರಲೇಬೇಕು. ಅದನ್ನಿಟ್ಟುಕೊಂಡು ಕುಟುಂಬದ ವೈಯಕ್ತಿಕ ಭಾವನೆಗಳಿಗೂ ಬೆಲೆಕೊಡಬೇಕು. ಕರ್ತವ್ಯದಲ್ಲಿದ್ದು ಅದನ್ನು ಮರೆಯಬೇಡಿ, ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಲು ತಮಗೆ ಹೆಚ್ಚಿನ ಶಕ್ತಿ ದೊರೆಯಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಮರ್ಪಣೆ ಮಾಡಿದ ನಂತರ ಮಾತನಾಡಿ ದೇಶ, ಸಮಾಜದ ಸ್ವಾಸ್ಥ್ಯ ಕಾಪಾಡುವುದಕ್ಕಾಗಿ ದುಡಿಯುವ ಪೊಲೀಸ್ ಇಲಾಖೆಯ ಅಮೋಘ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಸಮಾಜದ ನೆಮ್ಮದಿ ಕಾಪಾಡುವ ಹೊಣೆ ಹೊತ್ತು ಕರ್ತವ್ಯ ನಿರ್ವಹಿಸುವ ಪೊಲೀಸ್ ಇಲಾಖೆಗೆ ಸಮಾಜ ಎಷ್ಟರಮಟ್ಟಿಗೆ ಗೌರವ ನೀಡುತ್ತದೆ ಎಂದು ನೋಡಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ತಿಳಿ ಹೇಳಬೇಕು. ಇದಕ್ಕೆ ಉತ್ತಮ ಉದಾಹರಣೆ ಶ್ರೀ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಜನಸಂದಣಿ ನಿಯಂತ್ರಣ ಮಾಡುವುದನ್ನು ಕಣ್ಣಾರೆ ನೋಡಿದ್ದೇವೆ. ಇವರಿಗೆ ನೈತಿಕ ಬೆಂಬಲ ನೀಡಬೇಕು ಎಂದರು.

ಕರ್ತವ್ಯ ಪಾಲನೆಯಲ್ಲಿ ಸದಾ ನಿರತರಾಗಿ ನಮ್ಮೆಲ್ಲರ ಸುರಕ್ಷತೆಗೆ ಶ್ರಮಿಸುವ ದೇಶದ ಭದ್ರತೆಗೆ ಹೋರಾಡಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಶೌರ್ಯ, ಸಮರ್ಪಣೆ, ತ್ಯಾಗವನ್ನು ಸ್ಮರಿಸಿ ಗೌರವಿಸುವುದು ನಮ್ಮೆಲರ ಕರ್ತವ್ಯ, ಅಂತಹ ಮಹಾನುಭಾವರನ್ನೆಲ್ಲ ಸ್ಮರಿಸುತ್ತಾ ಅವರ ಕುಟುಂಬಸ್ಥರಿಗೆ ವಂದಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಮರ್ಪಣೆ ಮಾಡಿದ ನಂತರ ೨೦೨೪ರ ಸೆಪ್ಟೆಂಬರ್ ತಿಂಗಳಿನಿಂದ ೨೦೨೫ರ ಆಗಸ್ಟ್ ೩೧ರವರೆಗೆ ದೇಶದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ದೇಶಕ್ಕಾಗಿ ತಮ್ಮ ಜೀವ ಅರ್ಪಣೆ ಮಾಡಿದ ಒಟ್ಟು ೧೯೧ ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಓದಿ ಸ್ಮರಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಮತ್ತಿತರ ಅಧಿಕಾರಿ ಹಾಗೂ ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.