ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಸಭೆಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬರ ನಿರ್ವಹಣೆ ಮಾಡುವ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವುದು ಕಡ್ಡಾಯ.ತುರ್ತು ಸಂದರ್ಭಗಳಲ್ಲಿ ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅಥವಾ ರಜೆ ತೆಗದುಕೊಳ್ಳದೆ ಕೇಂದ್ರಸ್ಥಾನ ಬಿಟ್ಟು ತೆರಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಕರ್ತವ್ಯಲೋಪ ಎಸಗಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ. ವ್ಯವಸ್ಥೆಯಲ್ಲಿ ಲೋಪದೋಷಗಳು ಅಥವಾ ತೊಂದರೆಗಳಾದಾಗ ಸಾರ್ವಜನಿಕರು ಜನಪ್ರತಿನಿಧಿಗಳನ್ನು ಹಾಗೂ ಸರ್ಕಾರವನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡುತ್ತಾರೆ. ಅಧಿಕಾರಿಗಳು ತಮ್ಮ ಅಧಿಕಾರ ಮತ್ತು ಜವಾಬ್ದಾರಿಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.
ಕೆಲವು ಅಧಿಕಾರಿಗಳು ಕ್ಷೇತ್ರ ಮಟ್ಟಕ್ಕೆ ಹೋಗಿ ಪರಿಶೀಲನೆ ನಡೆಸದೆ, ಸಭೆಗಳಲ್ಲಿ ಕೇವಲ ಕಾಗದದ ಮೇಲಿನ ಮಾಹಿತಿಯನ್ನಷ್ಟೇ ನೀಡುತ್ತಿದ್ದಾರೆ. ಯಾರೂ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಾರೋ ಅವರು ಮಾತ್ರ ಸಭೆಯಲ್ಲಿ ಆತ್ಮವಿಶ್ವಾಸದಿಂದ ಮಾಹಿತಿ ನೀಡಲು ಸಾಧ್ಯ. ಇನ್ನು ಮುಂದೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ನೀಡಬೇಕು.ವಿಶೇಷವಾಗಿ ಪ್ರಕೃತಿ ವಿಕೋಪ ಹಾಗೂ ಬರಗಾಲದಂತಹ ಸವಾಲಿನ ಪರಿಸ್ಥಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಾಲೂಕು ಕೇಂದ್ರಗಳಲ್ಲೇ ಇರಬೇಕು ಎಂದರು.ಸಾರ್ವಜನಿಕರನ್ನು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಪದೇ ಪದೇ ಅಲೆದಾಡಿಸುವುದು ಮತ್ತು ಉದಾಸೀನತೆ ತೋರುವುದನ್ನು ಸಹಿಸಲು ಸಾಧ್ಯವಿಲ್ಲ. ಕರ್ತವ್ಯ ಲೋಪ, ನಿರ್ಲಕ್ಷ್ಯ ಅಥವಾ ಆರ್ಥಿಕ ಅವ್ಯವಹಾರಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು.
ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ, ಜನಸಂಪರ್ಕ ಸಭೆ ನಡೆಸಲಾಗುವುದು. ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.ಸಾರ್ವಜನಿಕರ ರಸ್ತೆ, ನೀರಾವರಿ, ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಪರಿಶೀಲಿಸಲಾಗುತ್ತದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ನೆಪ ಹೇಳದೆ ಅರ್ಜಿ ವಿಲೇವಾರಿಗೆ ಜವಾಬ್ದಾರರಾಗಿರುತ್ತಾರೆ ಎಂದರು.
ಶಾಸಕರಾದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ರಾಜ್ಯ ದ್ರಾಕ್ಷ ರಸ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.