ಸಾರಾಂಶ
ಹನೂರು: ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ವ್ಯವಸ್ಥಾಪಕರು ಏಕಗವಾಕ್ಷಿ ಸಮಿತಿಯ ಅನುಮತಿ ಪಡೆದುಕೊಳ್ಳಬೇಕು ಜೊತೆಗೆ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಜೈರಾಮ್ ತಿಳಿಸಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಮುಖಂಡರ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.ಏಕಗವಾಕ್ಷಿ ಸರ್ಕಾರದ ಮಾರ್ಗಸೂಚಿಯಂತೆ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ವ್ಯವಸ್ಥಾಪಕರಿಗೆ ಅನುಮತಿ ಕಡ್ಡಾಯವಾಗಿದೆ, ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ ಹಾಗೂ ಚೆಸ್ಕಾಂ, ಅಗ್ನಿಶಾಮಕ ದಳ ಸೇರಿ ವಿವಿಧ ಇಲಾಖೆಗಳ ಅನುಮತಿ ಪಡೆದು ಆದೇಶ ಪಾಲಿಸಬೇಕು. ಗಣೇಶ ಪ್ರತಿಷ್ಠಾಪನೆ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಾರಿ ಗಣೇಶ ಚತುರ್ಥಿ ಆಚರಣೆ ನಂತರ ವಿಸರ್ಜನೆ ಮಾಡುವ ಸಲುವಾಗಿ ಬಿಡುವ ಬಿಡುವ ಸುತ್ತೋಲೆಯನ್ನು ಸಂಪೂರ್ಣವಾಗಿ ಪಾಲಿಸಬೇಕು. ಸಂಪೂರ್ಣವಾಗಿ ಡಿಜೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವುದು, ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮನವರಿಕೆ ಮಾಡಿಕೊಟ್ಟರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲಿನ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.