ಚಿಕ್ಕಮಗಳೂರುಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ಹೇಳಿದರು.

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಬೃಹತ್ ಆಯುಷ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಯುಷ್ ಇಲಾಖೆ, ಆರೋಗ್ಯ ಇಲಾಖೆ, ಡೆಲ್ಟಾ ಐ ಕೇರ್, ಜಿಲ್ಲಾ ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ನ್ಯಾಯಾಲಯದ ಎಡಿಆರ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಆಯುಷ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ತಮ್ಮ ದೈನಂದಿನ ಕಾರ್ಯಕಲಾಪಗಳಲ್ಲಿ ನಿರತರಾಗಿ ಆರೋಗ್ಯದ ಕಡೆಗೆ ಸರಿಯಾದ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರತಿಯೊಬ್ಬರೂ ತಪಾಸಣೆಗೆ ಒಳಗಾಗುವುದು ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್. ಕೆ.ಮಂಜುನಾಥ್ ಮಾತನಾಡಿ, ಸರ್ಕಾರ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಉಚಿತ ತಪಾಸಣೆ ಮತ್ತು ಔಷಧಿ ವಿತರಣೆ ಸೌಲಭ್ಯ ನೀಡುತ್ತಿವೆ. ಆದರೆ, ಪ್ರತಿಯೊಬ್ಬರೂ ತಮ್ಮ ಜೀವನ ಶೈಲಿ ಬದಲಾಯಿಸಿಕೊಳ್ಳುವ ಮೂಲಕ ಸರಿಯಾದ ಆಹಾರ ಕ್ರಮ, ನಿಯಮಿತ ನಡಿಗೆ, ಪ್ರಾಣಾ ಯಾಮ ಹಾಗೂ ಯೋಗಾಸನ ರೂಢಿಸಿಕೊಂಡರೆ ಹಲವಾರು ಕಾಯಿಲೆಗಳಿಂದ ದೂರವಿರಲು ಸಾಧ್ಯ ಎಂದು ಸಲಹೆ ನೀಡಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್.ಗೀತಾ, ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಸುಜೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಕಾನೂನು ಅಭಿರಕ್ಷಕ ನಟರಾಜ್ ಉಪಸ್ಥಿತರಿದ್ದರು.