ಸಹಕಾರಿ ಕ್ಷೇತ್ರದ ಬಲವರ್ಧನೆ ಮತ್ತು ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ನೆರವು ಹಾಗೂ ಸಹಕಾರ ನೀಡಲು ಪ್ರಯತ್ನಿಸುತ್ತೇನೆ. ಎಲ್ಲ ಸಹಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ಸಹಕಾರಿ ಕ್ಷೇತ್ರದ ಬಲವರ್ಧನೆ ಮತ್ತು ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ನೆರವು ಹಾಗೂ ಸಹಕಾರ ನೀಡಲು ಪ್ರಯತ್ನಿಸುತ್ತೇನೆ. ಎಲ್ಲ ಸಹಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಜಿಲ್ಲಾ ಸಹಕಾರ ಯೂನಿಯನ್ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ತಲುಪಿಸುವ ಪ್ರಮುಖ ಮಾಧ್ಯಮವಾಗಿದೆ. ಈ ಕ್ಷೇತ್ರದ ಬೆಳವಣಿಗೆಗೆ ಎಲ್ಲರೂ ಪರಸ್ಪರ ಸಹಕಾರ, ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಯೂನಿಯನ್‌ನ ಬೇಡಿಕೆಗಳ ಕುರಿತು ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಸವರಾಜ ಅರಬಗೊಂಡ ಮಾತನಾಡಿ, ಖಾಸಗಿ ರಂಗದ ಸ್ಪರ್ಧೆಯ ನಡುವೆ ಸಹಕಾರಿ ಕ್ಷೇತ್ರವನ್ನು ಬಲಿಷ್ಠಗೊಳಿಸುವುದು ಇಂದಿನ ಅಗತ್ಯವಾಗಿದೆ. ಶಿಕ್ಷಣ, ತರಬೇತಿ ಮತ್ತು ಪ್ರಚಾರ ಸಹಕಾರ ಚಳವಳಿಯ ಮೂಲ ಉದ್ದೇಶಗಳಾಗಿವೆ. ಸಹಕಾರ ವ್ಯವಸ್ಥೆ ಇಲ್ಲದಿದ್ದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವುದು ಕಷ್ಟವಾಗುತ್ತಿತ್ತು. ಪಡಿತರ, ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಹಲವು ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಯುವಜನತೆ, ಮಹಿಳೆಯರು ಹಾಗೂ ವಿದ್ಯಾವಂತರು ಸಹಕಾರಿ ವ್ಯವಸ್ಥೆಯಲ್ಲಿ ಸದಸ್ಯತ್ವ ಪಡೆದು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಗುಜರಾತ್‌ನಲ್ಲಿ ಸಹಕಾರಿ ಕ್ಷೇತ್ರದ ಮೂಲಕ 90 ಸಾವಿರ ಕೋಟಿ ರು. ವಹಿವಾಟು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಸಂಸ್ಥೆಗಳಿಗೂ ಸವಾಲು ನೀಡುವ ರೀತಿಯಲ್ಲಿ ಸಹಕಾರಿ ಸಂಸ್ಥೆಗಳನ್ನು ಬೆಳೆಸಬೇಕಿದೆ. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಕೆಸಿಸಿ ಬ್ಯಾಂಕ್ ಸ್ಥಾಪನೆಯಾಗುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಅವರು ಯೂನಿಯನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಸಹಕಾರಿ ರಂಗದ ಸೌಲಭ್ಯಗಳು ತಲುಪಬೇಕು. ತಾಲೂಕಿನಲ್ಲಿ ಈಗಾಗಲೇ 9 ಕೋಟಿ ರು.ಗೂ ಅಧಿಕ ಸಾಲ ವಿತರಿಸಿದ್ದು, 180 ಟ್ರ್ಯಾಕ್ಟರ್‌ಗಳನ್ನು ನೀಡಲಾಗಿದೆ. ಧಾರವಾಡ, ಗದಗ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆಯ ಷೇರು ಪ್ರಮಾಣವೂ ಹೆಚ್ಚಿದೆ. ಹಿರೇಕೆರೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದ್ದು, ಈ ಸಂದರ್ಭದಲ್ಲಿ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸುವಂತೆ ಒತ್ತಡ ಹೇರಲಾಗುವುದು ಎಂದರು.

ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶೇಖರ ಭಜಂತ್ರಿ ಅವರು `ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ'''''''' ವಿಷಯ ಕುರಿತು ಉಪನ್ಯಾಸ ನೀಡಿದರು. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಪಾಟೀಲ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಧರಿಯಪ್ಪಗೌಡ ಪಾಟೀಲ ಮಾತನಾಡಿದರು.

ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಹಳ್ಳಿ, ಎಂ.ಎಂ. ಮೈದೂರ, ನಿರ್ದೇಶಕರಾದ ಮಲ್ಲಿಕಾರ್ಜುನ ಸಾತೇನಹಳ್ಳಿ, ಬಸನಗೌಡ ಪಾಟೀಲ, ಶಿವಾನಂದ ರಾಮಗೇರಿ, ವೀರಭದ್ರಪ್ಪ ಉಪ್ಪಿನ, ನಿಸ್ಸೀಮಗೌಡ ಪಾಟೀಲ, ಮೃತ್ಯುಂಜಯ ಎಲಿಗಾರ, ನೀಲಮ್ಮ ಮುದಿಗೌಡ್ರ, ಚಂದ್ರಶೇಖರ ಛತ್ರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಎಸ್.ಜಿ. ಸುಣಗಾರ, ವಿಕ್ರಮ್ ಕುಲಕರ್ಣಿ, ಪ್ರಕಾಶ ಹಿರೇಗೂಳಿ, ಪ್ರವೀಣ್ ಬಾರ್ಕಿ, ವಿ.ಎಚ್. ರಿತ್ತಿಗಾಣಿಗೇರ, ಬಸವೇಶಗೌಡ ಪಾಟೀಲ, ಚನ್ನವೀರಪ್ಪ ಬಸೇಗಣ್ಣಿ, ರುದ್ರಪ್ಪ ಜಾಲಿ, ಭುವನೇಶ್ವರ ಶಿಡ್ಲಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಯೂನಿಯನ್ ಸಿಇಒ ಸವಿತಾ ಹಿರೇಮಠ ನಿರ್ವಹಿಸಿದರು.