ಮತಚೋರಿ ಕುರಿತು ದೇಶದ ಪ್ರಜೆಗಳಿಗೆ ತಿಳಿಸುವುದು ಅಗತ್ಯ

| Published : Nov 09 2025, 01:30 AM IST

ಸಾರಾಂಶ

ದೊಡ್ಡಬಳ್ಳಾಪುರ: ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಚೋರಿ ಸಂಭವಿಸಿರುವುದು ಸಾಬೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ: ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಚೋರಿ ಸಂಭವಿಸಿರುವುದು ಸಾಬೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯಲ್ಲಿನಡೆದ ಓಟ್ ಚೋರಿ ಕುರಿತು ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.

ಬಿಜೆಪಿ ಪಕ್ಷ ಸಂವಿಧಾನ ಬಾಹಿರ ಕೆಲಸ ಮಾಡುತ್ತಿದೆ. ಅವರು ಮತಗಳ್ಳತನದಿಂದ ಅಧಿಕಾರ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಯಾರು ಹೆಚ್ಚು ಸಹಿ ಸಂಗ್ರಹ ಮಾಡುತ್ತಾರೆ, ಅವರನ್ನು ನೇರವಾಗಿ ರಾಹುಲ್ ಗಾಂಧಿಯವರೊಂದಿಗೆ ಭೇಟಿಯಾಗಿಸಲು ಅವಕಾಶ ನೀಡಲಾಗುವುದು. ಯಾರಿಗೆ ಜನ ವೋಟ್ ಕೊಟ್ಟರೆ, ಅವರು ರಾಜ್ಯಭಾರ ಮಾಡಬೇಕು. ಸಂವಿಧಾನ, ಕಾನೂನು ವಿರುದ್ದವಾಗಿ ರಾಜ್ಯಭಾರ ಆಗುತ್ತಿರುವುದು ಕಾಣುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ವಿಚಾರದಲ್ಲಿ ಕ್ರಿಯಾಶೀಲರಾಗಿದ್ದಾರೆ. ನಾವು ಅವರಿಗೆ ಮನವಿ ಮಾಡಿದ್ದೇವೆ. ಅದಕ್ಕಾಗಿ ಹೆಚ್ಚು ಸಹಿ ಸಂಗ್ರಹ ಮಾಡಬೇಕು ಎಂದರು.

ದೇವನಹಳ್ಳಿ ಮತಕ್ಷೇತ್ರದಲ್ಲಿ ಮತ್ತು ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಸಹ ಈ ಮನವಿಯನ್ನು ಜಾರಿ ಮಾಡಬೇಕು. ರಾಹುಲ್ ಗಾಂಧಿಯವರು ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತುತ್ತಿದ್ದಾರೆ. ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನ ಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಏಕೆಂದರೆ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ. ಹಾಗಾಗಿ ಭಾರತೀಯ ಚುನಾವಣಾ ಆಯೋಗ ಅಧಿಕಾರಿಗಳಿಗೆ ಸತ್ಯಾಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಘಾಟಿ ಪ್ರಾಧಿಕಾರದ ಸದಸ್ಯ ರಂಗಪ್ಪ, ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ನವೀನ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅರವಿಂದ್, ವಿವಿಧ ಘಟಕಗಳ ಮುಖ್ಯಸ್ಥರು, ಕಾರ್ಯಕರ್ತರು ಉಪಸ್ಥಿತರಿದ್ದರು.

8ಕೆಡಿಬಿಪಿ10- ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಹಮ್ಮಿಕೊಂಡಿದ್ದ ವೋಟ್ ಚೋರಿ ಕುರಿತು ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸಹಿ ಮಾಡಿ ಚಾಲನೆ ನೀಡಿದರು.

8ಕೆಡಿಬಿಪಿ11-

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಆಯೋಜಿಸಿದ್ದ ವೋಟ್ ಚೋರಿ ಕುರಿತು ಸಹಿ ಸಂಗ್ರಹ ಅಭಿಯಾನದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದರು.