ಸಾರಾಂಶ
ಹೊಸಕೋಟೆ: ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ನಿತ್ಯ ಜೀವನದ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಾಪಂ ಇಒ ಸಿ.ಎನ್.ನಾರಾಯಣ ಸ್ವಾಮಿ ತಿಳಿಸಿದರು.
ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಪಂ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ -೨೦೨೪ರ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಜತೆ ಸಾರ್ವಜನಿಕರು ಇಚ್ಛಾಶಕ್ತಿಯಿಂದ ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಕಾರ್ಯದಲ್ಲಿ ಕೈ ಜೋಡಿಸಿದಾಗ ಮಾತ್ರ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲು ಸಾಧ್ಯವಾಗಲಿದೆ. ಸಾರ್ವಜನಿಕರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಲು ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಂದೋಲನ ಆಯೋಜಿಸಲಾಗಿದ್ದು, ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಶಾಲಾ- ಕಾಲೇಜು, ದೇವಾಲಯ, ಆಸ್ಪತ್ರೆ, ಉದ್ಯಾನವನಗಳಲ್ಲಿ ವಿವಿಧ ಬಗೆಯ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಗ್ರಾಮಗಳನ್ನು ಪರಿಪೂರ್ಣ ಸ್ವಚ್ಛತೆ, ಸುಂದರ ನಗರ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪಿಡಿಒ ಮೆಹಬೂಬ್ ಮಾತನಾಡಿದರು.ಗ್ರಾಪಂ ಅಧ್ಯಕ್ಷೆ ಗಾಯತ್ರಿ ಎನ್. ಗೋಪಾಲ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಕಾರ್ಯದರ್ಶಿಗಳು, ಗ್ರಾಮ ಪಂಚಾಯ್ತಿ ಸದಸ್ಯರು, ಆಶಾ ಕಾರ್ಯಕರ್ತೆಯರು ,ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು.