ಸಾರಾಂಶ
ಚಿಕ್ಕಮಗಳೂರು ನಗರಸಭೆಯ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ನಗರಸಭೆ ಹಾಗೂ ಕೆ.ಆರ್.ಎಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಿಂದ ಗುರುವಾರ ನಗರದ ಕೆ.ಆರ್.ಎಸ್ ಆಸ್ಪತ್ರೆಯಲ್ಲಿ ಪೌರ ಕಾರ್ಮಿಕರು, ವಾಹನ ಚಾಲಕರು, ರೋಡಲ್ಸ್ ಹಾಗೂ ಯುಜಿಡಿ ಸಹಾಯಕರಿಗೆ ಆಯೋಜಿಸಿದ್ದ ಸಮಗ್ರ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಆರೋಗ್ಯ ಬಹು ಮುಖ್ಯ, ನಮ್ಮ ಸುತ್ತ ಮುತ್ತ ಪರಿಸರವನ್ನು ಸ್ವಚ್ಛವಾಗಿರಿಸಿ ಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಪೌರ ಕಾರ್ಮಿಕರು ತಮ್ಮ ಆರೋಗ್ಯ ಲೆಕ್ಕಿಸದೆ ನಗರದ ಸ್ವಚ್ಛತೆ ಕಾಪಾಡುವುದರ ಜೊತೆಗೆ ನಮ್ಮ ಆರೋಗ್ಯ ರಕ್ಷಿಸುವಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ. ಪ್ರತಿಯೊಬ್ಬ ಪೌರ ಕಾರ್ಮಿಕರು ಆರೋಗ್ಯ ವಾಗಿರಬೇಕು ಎನ್ನುವ ದೃಷ್ಟಿಯಿಂದ ಪ್ರತಿ ವರ್ಷ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ನಗರದ ಎಲ್ಲಾ ಪೌರ ಕಾರ್ಮಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಆರೋಗ್ಯ ನಮ್ಮೆಲ್ಲರ ಬಹುಮುಖ್ಯ ಸಂಪತ್ತು, ಪ್ರಸ್ತುತ ಜೀವನ ಕ್ರಮ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಗಳಿಂದ ಆರೋಗ್ಯದಲ್ಲಿ ಏರುಪೇರು ಸಹಜವಾಗಿದೆ. ಉತ್ತಮ ಜೀವನ ಕ್ರಮ ಅನುಸರಿಸಿ ದೇಹಕ್ಕೆ ಅಗತ್ಯ ಆಹಾರ ಪದ್ಧತಿ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಪೌರ ಕಾರ್ಮಿಕರು ತಮ್ಮ ಕಾರ್ಯನಿಷ್ಠೆಯಿಂದ ಇಡೀ ನಗರದ ಆರೋಗ್ಯ ಕಾಪಾಡುವಲ್ಲಿ ಶ್ರಮವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಆರೋಗ್ಯ ತಪಾಸಣೆ ನಂತರ ವೈದ್ಯರ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ನಗರಸಭೆಯಲ್ಲಿರುವ 200ಕ್ಕೂ ಹೆಚ್ಚಿನ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸುವ ಜೊತೆಗೆ ಎಲ್ಲಾ ಪೌರ ಕಾರ್ಮಿಕರಿಗೆ ವಿಮೆ ಸೌಲಭ್ಯ ಒದಗಿಸಿ ಕೊಡಲಾಗುತ್ತಿದೆ. ನಗರವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕೆಂದರೆ ಪೌರ ಕಾರ್ಮಿಕರು ಆರೋಗ್ಯ ವಾಗಿರಬೇಕು. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಗರ ಸಭೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಕುಟುಂಬವನ್ನು ಸುಧಾರಿಸಿಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ನಗರಸಭಾ ಪೌರಾಯುಕ್ತ ಬಿ.ಸಿ. ಬಸವರಾಜು, ಕೆಆರ್ ಎಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಡಾ. ಯೋಗೀಶ್, ನಗರಸಭಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕವಿತಾ ಲಿಂಗರಾಜು ಹಾಗೂ ನಗರಸಭಾ ಪೌರ ಕಾರ್ಮಿಕರು ಹಾಗೂ ಕೆಆರ್ ಎಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು. 11 ಕೆಸಿಕೆಎಂ 3ಚಿಕ್ಕಮಗಳೂರಿನ ಕೆಆರ್ ಎಸ್ ಆಸ್ಪತ್ರೆಯಲ್ಲಿ ಗುರುವಾರ ಪೌರ ಕಾರ್ಮಿಕರು, ವಾಹನ ಚಾಲಕರು, ರೋಡಲ್ಸ್ ಹಾಗೂ ಯುಜಿಡಿ ಸಹಾಯಕರಿಗೆ ಆಯೋಜಿಸಿದ್ದ ಸಮಗ್ರ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು. ಎಂಎಲ್‌ಸಿ ಸಿ.ಟಿ. ರವಿ, ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಪೌರಾಯುಕ್ತ ಬಸವರಾಜ್, ಲೋಕೇಶ್ ಇದ್ದರು.