ಸಾರಾಂಶ
ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಹವಾಮಾನ ವೈಪರಿತ್ಯಗಳಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯವಾಗಿದೆ ಎಂದು ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದರು.ನಗರದ ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಪೂರ್ವಜರು ಸುಂದರವಾದ ಪರಿಸರವನ್ನು ನಮಗೆ ನೀಡಿದ್ದು, ಅದನ್ನು ಉಳಿಸಿಕೊಳ್ಳಬೇಕು. ಪರಿಸರ ಸಂರಕ್ಷರಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಒತ್ತು ನೀಡಬೇಕು ಎಂದರು.ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಹಿರಿಯ ಸಮಾಲೋಚಕಿ ಡಾ.ಬಿ.ಸರಿತಾ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಪರಿಸರದ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಂ.ಎ.ಲತಾ, ಹವಾಮಾನ ಬದಲಾವಣೆಯ ಮುಖ್ಯ ಅಂಶಗಳನ್ನು ತಿಳಿಸಿಕೊಟ್ಟರು.ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಪೊನ್ನಂಪೇಟೆ ಅರಣ್ಯ ವಿಶ್ವ ವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಂ.ಮಂಜುನಾಥ್ ಅವರು ‘ಕಾರ್ಬನ್ ಕ್ರೆಡಿಟ್’ ಕುರಿತು ಕೊಡಗಿನಲ್ಲಿರುವ ಅವಕಾಶಗಳ ಬಗ್ಗೆ ವಿವರಿಸಿದರು.ಜಿ.ಪಂ. ಎನ್.ಆರ್.ಡಿ.ಎಂ.ಎಸ್ ವಿಭಾಗದ ಪ್ರೊಜೆಕ್ಟ್ ಅಸೋಸಿಯೆಟ್ ಇಂಚರ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.