ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ವಿ.ಲೋಕೇಶ್

| Published : Oct 25 2025, 01:00 AM IST

ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೀಡುವುದು ನಮ್ಮೆಲ್ಲರ ಜವಾಬ್ದಾರಿ: ಎಸ್.ವಿ.ಲೋಕೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್, ಶಬ್ದಮಾಲಿನ್ಯದ ಜೊತೆಗೆ ಅತಿ ಹೆಚ್ಚು ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಬಳಸುವುದರಿಂದಲೂ ಪರಿಸರ ಮಾಲಿನ್ಯವನ್ನು ಕಾಣಬಹುದು. ಸಾವಯವ ಕೃಷಿಯ ಜೊತೆಗೆ ಮರು ಬಳಕೆ ಮಾಡುವ ವಸ್ತುಗಳನ್ನು ಪ್ರತಿಯೊಬ್ಬರು ಬಳಸಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮಾಲಿನ್ಯವನ್ನು ತಡೆಗಟ್ಟುವ ಮೂಲಕ ಸ್ವಚ್ಛ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಎಸ್.ವಿ.ಲೊಕೇಶ್ ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ನಡೆದ ಪರಿಸರ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಬೇಕಿದೆ. ಇದಕ್ಕಾಗಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್, ಶಬ್ದಮಾಲಿನ್ಯದ ಜೊತೆಗೆ ಅತಿ ಹೆಚ್ಚು ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಬಳಸುವುದರಿಂದಲೂ ಪರಿಸರ ಮಾಲಿನ್ಯವನ್ನು ಕಾಣಬಹುದು. ಸಾವಯವ ಕೃಷಿಯ ಜೊತೆಗೆ ಮರು ಬಳಕೆ ಮಾಡುವ ವಸ್ತುಗಳನ್ನು ಪ್ರತಿಯೊಬ್ಬರು ಬಳಸಬೇಕೆಂದು ಕರೆ ನೀಡಿದರು.

ತಾಪಂ ಇಒ ಎಚ್.ಜಿ ಶ್ರೀನಿವಾಸ್ ಮಾತನಾಡಿ, ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅ.28ರಂದು ಪರಿಸರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರು ಭಾಗವಹಿಸಬೇಕೆಂದು ತಿಳಿಸಿದರು.

ತಾಪಂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು, ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಪರಿಸರ ಜಾಗೃತಿ ಜಾಥಾ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಬಗ್ಗೆ ಘೋಷಣೆ ಕೂಗಿದರು.

ಈ ವೇಳೆ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಕಾವೇರಿ ನೀರಾವರಿ ನಿಗಮ ಎಇಇ ಭರತೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ಸಿಡಿಪಿಒ ನಂಜಮಣಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಂತೋಷ್ ಸೇರಿದಂತೆ ಇತರರು ಇದ್ದರು.