ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಸ್ವಾತಂತ್ರ್ಯr, ಸಮಾನತೆ ಹಾಗೂ ಗೌರವಯುತ ಬದುಕಿಗೆ ಆಧಾರವಾಗಿದ್ದು, ಸಂವಿಧಾನದ ಆಶಯಗಳನ್ನು ಅರಿತು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗರಾಜ್ ಎಲ್. ಹೇಳಿದರು.

ಹಾವೇರಿ: ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಸ್ವಾತಂತ್ರ‍್ಯ, ಸಮಾನತೆ ಹಾಗೂ ಗೌರವಯುತ ಬದುಕಿಗೆ ಆಧಾರವಾಗಿದ್ದು, ಸಂವಿಧಾನದ ಆಶಯಗಳನ್ನು ಅರಿತು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗರಾಜ್ ಎಲ್. ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ `ಸಂವಿಧಾನ ದಿನಾಚರಣೆ-2026'''''''' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದ ಸಂವಿಧಾನವು ದೇಶದ ಆತ್ಮವಾಗಿದ್ದು, ಸಂವಿಧಾನದ ಪೀಠಿಕೆಯು ಅದರ ಹೃದಯ ಮತ್ತು ಆತ್ಮವಾಗಿದೆ. ಸಂವಿಧಾನದ ಪೀಠಿಕೆಯ ಆಶಯಗಳನ್ನು ಅರಿತುಕೊಳ್ಳುವುದರಿಂದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಹಕ್ಕು, ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ‍್ಯದ ಮಹತ್ವವನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಂವಿಧಾನವು ದೇಶದ 140 ಕೋಟಿ ಜನರಿಗೆ ನೆಮ್ಮದಿಯ ಜೀವನ ನಡೆಸಲು, ಅಭಿವ್ಯಕ್ತಿ ಸ್ವಾತಂತ್ರ‍್ಯ ಹೊಂದಲು ಹಾಗೂ ಮೇಲು-ಕೀಳು ಎಂಬ ಭೇದವಿಲ್ಲದೆ ಸಮಾನತೆಯಿಂದ ಬದುಕಲು ಅವಕಾಶ ಕಲ್ಪಿಸಿದೆ ಎಂದರು.

ಸಂವಿಧಾನವು ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ನೀಡುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನೂ ನಿರ್ವಹಿಸುವಂತೆ ತಿಳಿಸುತ್ತದೆ. ಜಾತಿ, ಧರ್ಮ ಹಾಗೂ ಇತರ ಯಾವುದೇ ಆಧಾರದ ಮೇಲೆ ತಾರತಮ್ಯ ಮಾಡದೆ ಎಲ್ಲರೂ ಸಮಾನತೆಯಿಂದ ಬದುಕಬೇಕು. ಸಮಾಜದಲ್ಲಿ ಭ್ರಾತೃತ್ವದ ಭಾವನೆ ಬೆಳೆಸಿಕೊಂಡು ಪರಸ್ಪರ ಗೌರವದಿಂದ ನಡೆದುಕೊಳ್ಳುವುದು ಸಂವಿಧಾನದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಪುರುಷರ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವುದು, ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಗತ್ಯವಾದ ಕಾನೂನುಬದ್ಧ ವ್ಯವಸ್ಥೆಯನ್ನು ರೂಪಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗಗಳು ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಜ್ಞಾನ, ದೂರದೃಷ್ಟಿ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ ಅವರು, ಅಂಬೇಡ್ಕರ್ ಅವರು ವಿಶ್ವದಾದ್ಯಂತ ಗೌರವಿಸಲ್ಪಡುವ ಮಹಾನ್ ಚಿಂತಕರಾಗಿದ್ದಾರೆ. ಅವರ ಸಂವಿಧಾನಾತ್ಮಕ ಚಿಂತನೆಗಳು ಪ್ರಜಾಪ್ರಭುತ್ವವನ್ನು ಬಲಪಡಿಸುವುದರ ಜೊತೆಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು. ಸಂವಿಧಾನದ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿ ಚಂದ್ರಪ್ಪ ಸಿ., ಜಿಲ್ಲಾ ಖಜಾನಾಧಿಕಾರಿ ಬಿ.ಸುರೇಶ, ಉಡಚಪ್ಪ ಮಾಳಗಿ ಹಾಗೂ ವಿವಿಧ ಸಂಘಟನೆ ಮುಖಂಡರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.