ಸಾರಾಂಶ
ಕಲಬುರಗಿ : ಲೋಕಸಭಾ ಚುನಾವಣೆಯಲ್ಲಿ ಭಾರೀ ಹಣ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ ಇದೀಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಲಬುರಗಿಯಲ್ಲಿ ಶನಿವಾರ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ನಗದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಹಣ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆಪ್ತರೂ ಆಗಿರುವ ಕಾಂಗ್ರೆಸ್‌ನ ಮಾಜಿ ಮೇಯರ್ ಶರಣು ಮೋದಿ ಅವರಿಗೆ ಸೇರಿದ್ದು ಎಂದು ಹೇಳಲಾಗಿದೆ.ನಗರದ ರೈಲ್ವೆ ನಿಲ್ದಾಣದ ಬಳಿ ಹಣ ಸಮೇತ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೈಲಿನ ಮೂಲಕ ಬಂದ ಹಣವನ್ನು ಕಾರಿಗೆ ತುಂಬಿಸಿ ಬೇರೆಡೆ ಸಾಗಿಸುವಾಗ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ದಾಳಿ ವೇಳೆ ಕಾರು ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ನಗರದ ಖರ್ಗೆ ಪೆಟ್ರೋಲ್ ಬಂಕ್ ಬಳಿ ಇರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಕಾರು ಹಾಗೂ ಹಣದ ಕಂತೆಗಳನ್ನು ತರಲಾಗಿದೆ. ಈ ಹಣ ಚುನಾವಣಾ ಅಕ್ರಮಕ್ಕೆ ಬಳಕೆಗಾಗಿ ಸಾಗಿಸುತ್ತಿರುವ ಶಂಕೆ ವ್ಯಕ್ತವಾಗಿದೆಯಾದರೂ ಆದಾಯ ತೆರಿಗೆ ಅಧಿಕಾರಿಗಳು ಈವರೆಗೆ ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ.
;Resize=(128,128))
;Resize=(128,128))
;Resize=(128,128))